ಈಶ್ವರ ಬಿ. ಖಂಡ್ರೆ
ಬೆಂಗಳೂರು: ರಾಜ್ಯ ಸರ್ಕಾರವು ಇದೇ 21ರಂದು ವಿಧಾನಸೌಧದ ಎದುರು ನಡೆಯಲಿರುವ ಸಮಾರಂಭದಲ್ಲಿ, ನೆರೆಯ ಆಂಧ್ರಪ್ರದೇಶಕ್ಕೆ ಪಳಗಿಸಿದ ಆನೆಗಳನ್ನು ಹಸ್ತಾಂತರಿಸಲಿದೆ.
‘ಆಂಧ್ರಪ್ರದೇಶದಲ್ಲಿ ಆನೆ–ಮಾನವ ಸಂಘರ್ಷ ತಡೆ ಮತ್ತು ಪುಂಡಾನೆಗಳ ಸೆರೆ ಕಾರ್ಯಾಚರಣೆಗಳಲ್ಲಿ ಬಳಸಲು ಕುಮ್ಕಿ ಆನೆಗಳನ್ನು ಒದಗಿಸುವಂತೆ ಮತ್ತು ಮಾವುತರಿಗೆ ತರಬೇತಿ ನೀಡುವಂತೆ, ಅಲ್ಲಿನ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರ ಭಾಗವಾಗಿ ಪಳಗಿಸಿದ ಕುಮ್ಕಿ ಆನೆಗಳನ್ನು ನೀಡುತ್ತಿದ್ದೇವೆ’ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದ್ದಾರೆ.
‘ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಸಮಾರಂಭ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪವನ್ ಕಲ್ಯಾಣ್ ಅವರಿಗೆ ಆನೆಗಳನ್ನು ಹಸ್ತಾಂತರಿಸಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.
‘2024ರ ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ, ಆನೆ–ಮಾನವ ಸಂಘರ್ಷ ಕುರಿತ ಅಂತರರಾಷ್ಟ್ರೀಯ ಸಮ್ಮೇಳನ ನಡೆದಿತ್ತು. ಆನೆ–ಮಾನವ ಸಂಘರ್ಷ ತಡೆ ಸಂಬಂಧ ಚಾಲ್ತಿಯಲ್ಲಿರುವ ಉತ್ತಮ ರೂಢಿಗಳ ವಿನಿಮಯಕ್ಕೆ ಕರ್ನಾಟಕ, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದ್ದವು. ಅದರ ಭಾಗವಾಗಿಯೇ ಆಂಧ್ರಪ್ರದೇಶಕ್ಕೆ ಆನೆಗಳನ್ನು ಹಸ್ತಾಂತರಿಸಲಾಗುತ್ತಿದೆ’ ಎಂದಿದ್ದಾರೆ.
‘ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ರಾಜ್ಯದ ಕೋಲಾರ ಜಿಲ್ಲೆ ವ್ಯಾಪ್ತಿಯಲ್ಲೂ ಆನೆ- ಮಾನವ ಸಂಘರ್ಷ ಹೆಚ್ಚುತ್ತಿದೆ. ಆಂಧ್ರಪ್ರದೇಶದಲ್ಲಿ ಪುಂಡಾನೆಗಳನ್ನು ಸೆರೆಹಿಡಿದರೆ, ಅಲ್ಲಿಂದ ಕೋಲಾರಕ್ಕೆ ಅವು ಬರುವುದು ನಿಲ್ಲಲಿದೆ. ಈ ನಿಟ್ಟಿನಲ್ಲಿ ಕುಮ್ಕಿ ಆನೆಗಳ ಹಸ್ತಾಂತರದಿಂದ ರಾಜ್ಯಕ್ಕೂ ಅನುಕೂಲವಾಗಲಿದೆ’ ಎಂದಿದ್ದಾರೆ.
ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಅಥವಾ ದಸರಾ ಮಹೋತ್ಸವಕ್ಕಾಗಿ ಈಗಾಗಲೇ ಗುರುತಿಸಲಾಗಿರುವ ಯಾವುದೇ ಕುಮ್ಕಿ ಆನೆಯನ್ನು ಆಂಧ್ರಪ್ರದೇಶಕ್ಕೆ ನೀಡುತ್ತಿಲ್ಲ.ಈಶ್ವರ ಬಿ. ಖಂಡ್ರೆ, ಅರಣ್ಯ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.