ADVERTISEMENT

ಕುರುಬರ ಹೋರಾಟ: ಮೀಸಲಾತಿಗಾಗಿ ಜ. 15ರಂದು ಪಾದಯಾತ್ರೆ ಆರಂಭ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2020, 20:34 IST
Last Updated 25 ಡಿಸೆಂಬರ್ 2020, 20:34 IST
ತುಮಕೂರಿನಲ್ಲಿ ಶುಕ್ರವಾರ ನಡೆದ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ ಮಾತನಾಡಿದರು. ಈಶ್ವರಾನಂದಪುರಿ ಸ್ವಾಮೀಜಿ ಇದ್ದಾರೆ
ತುಮಕೂರಿನಲ್ಲಿ ಶುಕ್ರವಾರ ನಡೆದ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ ಮಾತನಾಡಿದರು. ಈಶ್ವರಾನಂದಪುರಿ ಸ್ವಾಮೀಜಿ ಇದ್ದಾರೆ   

ತುಮಕೂರು: ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಪಾದಯಾತ್ರೆ ನಡೆಸಲು ನಗರದಲ್ಲಿ ಶುಕ್ರವಾರ ನಡೆದ ಕುರುಬರ ಎಸ್‌ಟಿ ಮೀಸಲಾತಿ ಹೋರಾಟ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಕಾಗಿನೆಲೆಯಿಂದ ಜನವರಿ 15ರಂದು ಪಾದಯಾತ್ರೆ ಆರಂಭವಾಗಲಿದ್ದು,340 ಕಿ.ಮೀ ಕ್ರಮಿಸಿ ಫೆಬ್ರುವರಿ 2ರಂದು ಬೆಂಗಳೂರು ತಲುಪಲಿದೆ. ಅಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಮೀಸಲಾತಿ ಬೇಡಿಕೆ ಮಂಡಿಸಲಾಗುತ್ತದೆ.

ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಸಮಿತಿಯ ಪೂರ್ವಭಾವಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ ಮಾತನಾಡಿ ‘ಪಾದಯಾತ್ರೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಸಮುದಾಯದ ಮುಖಂಡರು, ಜನಪ್ರತಿನಿಧಿಗಳು, ಮಹಿಳಾ ಸಂಘಟಕರ ಸಭೆಗಳನ್ನು ನಡೆಸಲಾಗಿದೆ. ಈಗಾಗಲೇ ಬಾಗಲಕೋಟೆಯಲ್ಲಿ ಬೃಹತ್ ಸಮಾವೇಶ ಸಂಘಟಿಸುವ ಮೂಲಕ ನಮ್ಮ ಹಕ್ಕೊತ್ತಾಯ ಮಂಡಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ಎಸ್‌ಟಿ ಮೀಸಲಾತಿ ಹೋರಾಟ ಕಾಗಿನೆಲೆ ಸ್ವಾಮೀಜಿ ನೇತೃತ್ವದಲ್ಲಿ ಪಕ್ಷಾತೀತವಾಗಿ ನಡೆಯುತ್ತಿದೆ. ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಿದ್ದರಾಮಯ್ಯ ಅವರು ಕುರುಬ ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರು ‘ಅಹಿಂದ’ ನಾಯಕರಾಗಿದ್ದು, ಹೋರಾಟದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ವಿವಿಧ ಸಮುದಾಯದವರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ಅದೇ ರೀತಿ ಕುರುಬ ಸಮುದಾಯಕ್ಕೂ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜನಾಂಗದ ಅಭಿವೃದ್ಧಿಗೆ ₹ 400 ಕೋಟಿ ನೀಡಿದ್ದರು. ಆದರೆ, ಯಡಿಯೂರಪ್ಪ ಅವರು ₹ 80 ಕೋಟಿ ನೀಡಿದ್ದಾರೆ ಎಂದರು.

ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ‘ಎಸ್‌ಟಿ ಮೀಸಲಾತಿ ಹೋರಾಟದಲ್ಲಿ ಕುರುಬ ಸಮುದಾಯದವರು ಭಾಗವಹಿಸಿದ್ದಾರೆ. ಆರ್‌ಎಸ್‌ಎಸ್‌ನ ಯಾವುದೇ ಮುಖಂಡರು ಪಾಲ್ಗೊಂಡಿಲ್ಲ. ಮೀಸಲಾತಿ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.