ADVERTISEMENT

ಅಭ್ಯರ್ಥಿಗಳ ಆಯ್ಕೆಯಲ್ಲಿ ಲೋಪವೇ ಕಾಂಗ್ರೆಸ್ ಸೋಲಿಗೆ ಕಾರಣ: ಮೊಯಿಲಿ

​ಪ್ರಜಾವಾಣಿ ವಾರ್ತೆ
Published 9 ಜೂನ್ 2024, 19:38 IST
Last Updated 9 ಜೂನ್ 2024, 19:38 IST
ಎಂ.ವೀರಪ್ಪ ಮೊಯಿಲಿ 
ಎಂ.ವೀರಪ್ಪ ಮೊಯಿಲಿ    

ನವದೆಹಲಿ: ಅಭ್ಯರ್ಥಿಗಳ ತಪ್ಪು ಆಯ್ಕೆ ಮತ್ತು ಕಳಪೆ ತಂತ್ರಗಾರಿಕೆಯಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ನೀಡಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಭಾನುವಾರ ಹೇಳಿದರು. 

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಇಲ್ಲಿಗೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಕರ್ನಾಟಕದಲ್ಲಿ ಕಾಂಗ್ರೆಸ್ 28 ಸ್ಥಾನಗಳಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಬೇಕಿತ್ತು. ನಾವು ಉತ್ತಮ ತಂತ್ರಗಾರಿಕೆಯನ್ನು ಅಳವಡಿಸಿಕೊಂಡಿದ್ದರೆ ಲೋಕಸಭಾ ಚುನಾವಣೆಯಲ್ಲೂ ಜಯಭೇರಿ ಬಾರಿಸುತ್ತಿದ್ದೆವು. ನಾವು ನಿಷ್ಠಾವಂತ ಕಾರ್ಯಕರ್ತರನ್ನು ಪರಿಗಣಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು. 

ಸ್ಥಳೀಯ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವತ್ತ ಗಮನ ಹರಿಸಬೇಕು ಮತ್ತು ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು. 

ADVERTISEMENT

ಐದು ಗ್ಯಾರಂಟಿಗಳು ಪಕ್ಷದ ಪ್ರಣಾಳಿಕೆಯಲ್ಲಿ ಘೋಷಣೆಯಾದವು. ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾದ ಕಾರಣಕ್ಕೆ ಅದನ್ನು ನಿಲ್ಲಿಸಬಾರದು. ಅದನ್ನು ನಿಲ್ಲಿಸಿ ಮತದಾರರಿಗೆ ದ್ರೋಹ ಬಗೆಯಬಾರದು ಎಂದು ಅವರು ಕಿವಿಮಾತು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.