ADVERTISEMENT

ಕೆರೆ ಸಂರಕ್ಷಣೆ | ಶೀಘ್ರವೇ ಸಿಎಂ ಅಧ್ಯಕ್ಷತೆಯಲ್ಲಿ ಸಭೆ: ಸಚಿವ ಬೋಸರಾಜು

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2024, 15:22 IST
Last Updated 2 ಡಿಸೆಂಬರ್ 2024, 15:22 IST
<div class="paragraphs"><p>ಎನ್ ಎಸ್ ಬೋಸರಾಜು, ಸಣ್ಣ ನೀರಾವರಿ ಸಚಿವ</p></div>

ಎನ್ ಎಸ್ ಬೋಸರಾಜು, ಸಣ್ಣ ನೀರಾವರಿ ಸಚಿವ

   

ಬೆಂಗಳೂರು: ರಾಜ್ಯದಲ್ಲಿ ಸುಮಾರು 40 ಸಾವಿರ ಜಲಮೂಲಗಳ ವ್ಯಾಪ್ತಿಯನ್ನು ಹೊಂದಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಶೀಘ್ರವೇ ನಡೆಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜು ತಿಳಿಸಿದರು.

ಇದಕ್ಕಾಗಿ ವಿವಿಧ ಇಲಾಖೆಗಳ ಮಧ್ಯೆ ಸಮನ್ವಯಗೊಳಿಸಲು ಸರ್ಕಾರದ ಮುಖ್ಯಕಾರ್ಯದರ್ಶಿ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಅವರು ಸಭೆ ನಡೆಸಿದರು.

ADVERTISEMENT

ಜಲ ಮೂಲಗಳ ಸಂರಕ್ಷಣೆ ಮತ್ತು ಸಮರ್ಪಕ ನಿರ್ವಹಣೆಯಿಂದ ಅಂತರ್ಜಲ ವೃದ್ಧಿಯಾಗಲಿದೆ. ಈ ದಿಸೆಯಲ್ಲಿ ಇಲಾಖೆಗಳ ಮಧ್ಯೆ ಸಮನ್ವಯ ಬಹಳ ಮುಖ್ಯ. ಈ ಜಲಮೂಲಗಳ ನಿರ್ವಹಣೆಗೆ ಹಣಕಾಸಿನ ಅಗತ್ಯವಿದೆ. ಇದಕ್ಕಾಗಿ ಮೀನುಗಾರಿಕೆ, ಫ್ಲೋಟಿಂಗ್‌ ಸೋಲಾರ್‌, ಬೋಟಿಂಗ್‌ನಂತಹ ಆದಾಯ ಮೂಲಗಳನ್ನು ಗುರುತಿಸಬೇಕು ಎಂದು ಅವರು ಸೂಚನೆ ನೀಡಿದರು.

ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ಹಲವು ಪ್ರಮುಖ ವಿಷಯಗಳ ಬಗ್ಗೆ ಅಂತಿಮ ತೀರ್ಮಾನಗಳನ್ನು ತೆಗೆದುಕೊಳ್ಳಬೇಕಾಗಿದೆ. ಆದ್ದರಿಂದ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಮ್ಮುಖದಲ್ಲೇ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುವುದು ಅತ್ಯಗತ್ಯ. ಈ ಸಭೆಯಲ್ಲಿ ಮಂಡಿಸಬೇಕಾದ ವಿಷಯಗಳ ಬಗ್ಗೆ ಅಗತ್ಯ ವರದಿಯನ್ನು ಸಲ್ಲಿಸಬೇಕು ಎಂದು ಬೋಸರಾಜು ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ಆಯವ್ಯಯದಲ್ಲಿ ಘೋಷಿಸಿರುವಂತೆ ಕೆರೆ ಬಳಕೆದಾರರ ಸಂಘಗಳನ್ನು ಪುನರುಜ್ಜೀವನಗೊಳಿಸುವುದಕ್ಕಾಗಿ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆಯೂ ಅಧಿಕಾರಿಗಳಿಗೆ ತಿಳಿಸಿದರು.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ರಾಘವನ್‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.