ADVERTISEMENT

HDK ವಿರುದ್ಧದ ಜಮೀನು ಒತ್ತುವರಿ: ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್‌ ಬುಲಾವ್‌

​ಪ್ರಜಾವಾಣಿ ವಾರ್ತೆ
Published 7 ಜನವರಿ 2025, 14:47 IST
Last Updated 7 ಜನವರಿ 2025, 14:47 IST
<div class="paragraphs"><p>ಎಚ್‌.ಡಿ.ಕುಮಾರಸ್ವಾಮಿ</p></div>

ಎಚ್‌.ಡಿ.ಕುಮಾರಸ್ವಾಮಿ

   

ಬೆಂಗಳೂರು: ‘ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಸಿವಿಲ್‌ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಕೈಬಿಡಬೇಕು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.  

‘ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ’ ಎಂದು ಆಕ್ಷೇಪಿಸಿ ಎಸ್‌.ಆರ್‌.ಹಿರೇಮಠ ನೇತೃತ್ವದ ‘ಸಮಾಜ ಪರಿವರ್ತನಾ ಸಮುದಾಯ’ ಸಲ್ಲಿಸಿರುವ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಕಿರಣ್ ವಿ.ರೋಣ ವಾದ ಮಂಡಿಸಿ, ‘ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತರು ನೀಡಿದ್ದ ಆದೇಶದ ಅನುಸಾರ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಲೋಕಾಯುಕ್ತದಲ್ಲಿದ್ದ ದೂರು ಮುಕ್ತಾಯಗೊಂಡಿದೆ. ಹಾಗಾಗಿ, ಈ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ಕೈಬಿಡಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಯಾಗಿ ಅರ್ಜಿದಾರ ಎಸ್‌.ಆರ್‌.ಹಿರೇಮಠ ಪರ ಹಾಜರಿದ್ದ ಪದಾಂಕಿತ ಹಿರಿಯ ವಕೀಲ ಎಸ್‌.ಬಸವರಾಜ್‌, ಕೇತಗಾನಹಳ್ಳಿ ವ್ಯಾಪ್ತಿಯ 14 ಎಕರೆ ಸರ್ಕಾರಿ ಜಮೀನನ್ನು ಎಚ್‌.ಡಿ.ಕುಮಾರಸ್ವಾಮಿ ಮತ್ತಿತರರು ಒತ್ತುವರಿ ಮಾಡಿರುವುದನ್ನು ತಹಶೀಲ್ದಾರ್ ಮತ್ತು ಸಂಬಂಧಿಸಿದ ಕಂದಾಯ ಅಧಿಕಾರಿಗಳು ಗುರುತಿಸಿದ್ದಾರೆ. ಅಂತೆಯೇ, ಲೋಕಾಯುಕ್ತ ನೀಡಿರುವ ಆದೇಶವನ್ನು ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿಲ್ಲ. ಬೇಕಿದ್ದರೆ ತಹಶೀಲ್ದಾರ್‌ ಮತ್ತು ಸಂಬಂಧಿಸಿದ ಕಂದಾಯ ಅಧಿಕಾರಿಗಳನ್ನು ಕೋರ್ಟ್‌ಗೆ ಕರೆಯಿಸಿ ವಿವರಣೆ ಪಡೆಯಬಹುದು’ ಎಂದರು.

ಈ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಿರಣ್‌ ರೋಣ ಅವರು, ‘ಯಾರನ್ನು ಕರೆಯಿಸಿಬೇಕು ಎಂದು ಈ ರೀತಿ ಕೋರ್ಟ್‌ಗೆ ಸೂಚಿಸುವುದು ಸೂಕ್ತವಲ್ಲ. ಸರ್ಕಾರ ಕೋರ್ಟ್‌ ಮೇಲೆ ಅಖಂಡ ಭರವಸೆ ಹೊಂದಿದೆ. ಅಂತೆಯೇ, ಈಗಾಗಲೇ 2024ರ ನವೆಂಬರ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ವಿಸ್ತೃತ ಕ್ರಮಗಳನ್ನು ಪ್ರಮಾಣ ಪತ್ರದ ಮೂಲಕ ವಿವರಿಸಲಾಗಿದೆ. ಅದನ್ನು ನ್ಯಾಯಪೀಠ ಮಾನ್ಯ ಮಾಡಬೇಕು’ ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯೇ ಈ ಕುರಿತು ಕೋರ್ಟ್‌ಗೆ ಖುದ್ದು ಹಾಜರಾಗಿ ವಿವರಣೆ ನೀಡಲಿ’ ಎಂದು ವಿಚಾರಣೆಯನ್ನು ಇದೇ 29ಕ್ಕೆ ಮುಂದೂಡಿತು.

ಏನಿದು ಅರ್ಜಿ?:

ಭೂಕಬಳಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಹೊರಡಿಸಿರುವ ಆದೇಶ ಜಾರಿಗೊಳಿಸುವಂತೆ ಹೈಕೋರ್ಟ್‌ ಈ ಹಿಂದೆ ಆದೇಶಿಸಿತ್ತು. ‘ಈ ಆದೇಶ ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ’ ಎಂದು ಆಕ್ಷೇಪಿಸಿ ಎಸ್‌.ಆರ್‌.ಹಿರೇಮಠ ನೇತೃತ್ವದ ‘ಸಮಾಜ ಪರಿವರ್ತನಾ ಸಮುದಾಯ’ ಈ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.