ಬೆಂಗಳೂರು: ‘ಕೊಚ್ಚಾಡಿಯನ್ ಸಿನಿಮಾದ ಆರ್ಥಿಕ ವ್ಯವಹಾರಗಳಲ್ಲಿ ಫೋರ್ಜರಿ ಅಪರಾಧಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ನನ್ನ ವಿರುದ್ಧ ಹೊರಿಸಲಾಗಿರುವ ದೋಷಾರೋಪ ಕೈಬಿಡಬೇಕು’ ಎಂದು ಕೋರಿ ನಟ ರಜನಿಕಾಂತ್ ಪತ್ನಿ ಲತಾ ಅವರು ಸಲ್ಲಿಸಿದ್ದ ಅರ್ಜಿಯನ್ನು, ನಗರದ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಎಸಿಜೆಎಂ) ಕೋರ್ಟ್ ತಿರಸ್ಕರಿಸಿದೆ.
‘ಲತಾ ರಜನಿಕಾಂತ್ ವಿರುದ್ಧದ ಆರೋಪಗಳನ್ನು ಕೈ ಬಿಡಲು ಸೂಕ್ತ ಕಾರಣಗಳಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ನಗರದ 48ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಸಂಕಪ್ಪ ಕಾಳೆ ಅವರು ಅರ್ಜಿ ತಿರಸ್ಕರಿಸಿ ಆದೇಶಿಸಿದ್ದಾರೆ.
‘ನನ್ನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವ ದಾಖಲೆಗಳನ್ನು ತನಿಖಾಧಿಕಾರಿಗಳು (ಪ್ರಾಸಿಕ್ಯೂಷನ್) ನ್ಯಾಯಾಲಯಕ್ಕೆ ಒದಗಿಸಿಲ್ಲ. ಆದ್ದರಿಂದ, ಆರೋಪಗಳನ್ನು ಕೈ ಬಿಡಬೇಕು’ ಎಂಬ ಲತಾ ರಜನಿಕಾಂತ್ ಅವರ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ.
‘ಎಫ್‌ಐಆರ್, ದೂರು ಮತ್ತು ದೋಷಾರೋಪ ಪಟ್ಟಿಯಲ್ಲಿ ನನ್ನ ವಿರುದ್ಧ ಯಾವುದೇ ಆರೋಪಗಳಿಲ್ಲ ಮತ್ತು ಇದು ಸಂಪೂರ್ಣವಾಗಿ ಸಿವಿಲ್ ಸ್ವರೂಪದ ಪ್ರಕರಣವಾಗಿದೆ ಎಂದು ಲತಾ ರಜನಿಕಾಂತ್ ನೀಡಿರುವ ಕಾರಣಗಳಿಂದ ಮಾತ್ರಕ್ಕೆ ಅವರ ವಿರುದ್ಧದ ಆರೋಪಗಳನ್ನು ಕೈ ಬಿಡಲು ಸಾಕೆನಿಸುವುದಿಲ್ಲ’ ಎಂದು ನ್ಯಾಯಾಧೀಶರು ಆದೇಶದಲ್ಲಿ ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.