ADVERTISEMENT

ವಕೀಲರ ಮೇಲೆ ಹಲ್ಲೆ ಪ್ರಕರಣ: ₹ 3 ಲಕ್ಷ ಪರಿಹಾರಕ್ಕೆ ಆದೇಶ

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 22:51 IST
Last Updated 19 ಜನವರಿ 2023, 22:51 IST
.
.   

ಬೆಂಗಳೂರು: ಸಿವಿಲ್ ವ್ಯಾಜ್ಯವೊಂದರಲ್ಲಿ ಮಧ್ಯಪ್ರವೇಶಿಸಿ ವಕೀಲರೊಬ್ಬರ ಮೇಲೆ ಕ್ರಿಮಿನಲ್‌ ಕೇಸ್ ದಾಖಲಿಸಿ ಅಮಾನವೀಯ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿತ ಸಂತ್ರಸ್ತ ವಕೀಲರಿಗೆ ಪೊಲೀಸ್ ಅಧಿಕಾರಿ ₹ 3 ಲಕ್ಷ ಪರಿಹಾರ ನೀಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ.

‘ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಸಬ್‌ಇನ್ಸ್‌ಪೆಕ್ಟರ್ ಕೆ.ಪಿ. ಸುತೇಶ್ ನನ್ನ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಪೊಲೀಸ್‌ ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಪ್ರಕರಣ ಕುರಿತು ಇಲಾಖಾ ವಿಚಾರಣೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ನನಗೆ ಪರಿಹಾರ ನೀಡಲು ಆದೇಶಿಸಬೇಕು’ ಎಂದು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪುತ್ತಿಲ ಗ್ರಾಮದ ವಕೀಲ ಕುಲದೀಪ್ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಈ ರಿಟ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ತೀರ್ಪು ಪ್ರಕಟಿಸಿದ್ದು, ಪರಿಹಾರದ ಮೊತ್ತವನ್ನು ತಪ್ಪಿತಸ್ಥ ಪೊಲೀಸ್‌ ಅಧಿಕಾರಿಯಿಂದಲೇ ವಸೂಲು ಮಾಡುವಂತೆ ನಿರ್ದೇಶಿಸಿದೆ.

ADVERTISEMENT

‘ಈಗಾಗಲೇ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕೈಗೊಂಡಿರುವ ಇಲಾಖಾ ವಿಚಾರಣೆಯನ್ನು ಒಂದು ತಿಂಗಳ ಒಳಗೆ ಪೂರ್ಣಗೊಳಿಸಿ ಹೈಕೋರ್ಟ್‌ಗೆ ವರದಿ ಸಲ್ಲಿಸಬೇಕು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಪೀಠ ನಿರ್ದೇಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.