ADVERTISEMENT

ಸಿಎಂ ಬದಲಾವಣೆ ಊಹಾಪೋಹ: ಲಕ್ಷ್ಮಣ‌ ಸವದಿ

ಉಪಮುಖ್ಯಮಂತ್ರಿ ಲಕ್ಷ್ಮಣ‌ ಸವದಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2020, 7:58 IST
Last Updated 28 ನವೆಂಬರ್ 2020, 7:58 IST
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ   

ಚಿತ್ರದುರ್ಗ: ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹ. ಮುಂದಿನ ಎರಡೂವರೆ ವರ್ಷದ ಅವಧಿಯನ್ನು ಬಿ.ಎಸ್‌.ಯಡಿಯೂರಪ್ಪ ಪೂರ್ಣಗೊಳಿಸುತ್ತಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ‌ ಸವದಿ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎರಡು ದಿನದಲ್ಲಿ ದೆಹಲಿಗೆ ತೆರಳಲಿದ್ದಾರೆ. ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ ಬಳಿಕ ಸಂಪುಟ ವಿಸ್ತರಿಸಬೇಕೇ ಅಥವಾ ಪುನರ್ ರಚಿಸಬೇಕೇ ಎಂಬ ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಕಚೇರಿ ಉದ್ಘಾಟನೆಗೆ ರಮೇಶ ಜಾರಕಿಹೊಳಿ ದೆಹಲಿಗೆ ತೆರಳಿದ್ದರು. ಆ ಸಮಾರಂಭದಲ್ಲಿ ಕಂದಾಯ ಸಚಿವ ಆರ್‌.ಅಶೋಕ್‌ ಹಾಗೂ ನಾನು ಪಾಲ್ಗೊಂಡಿದ್ದೆವು. ಸಚಿವ ಸಂಪುಟ ಹಾಗೂ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆದಿಲ್ಲ. ಬಿಜೆಪಿಯಲ್ಲಿ ಗುಂಪುಗಾರಿಕೆ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ’ ಎಂದು ಹೇಳಿದರು.

ADVERTISEMENT

‘ಸಾರಿಗೆ ನಿಗಮಗಳನ್ನು ವಿಲೀನಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಸಾರಿಗೆ ಇಲಾಖೆಯ ಅಧಿಕಾರಿಗಳು ಕೆಳ ಹಂತದ ಸಿಬ್ಬಂದಿಗೆ ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದು ತಪ್ಪು ಎಂಬುದನ್ನು ಸೂಕ್ಷ್ಮವಾಗಿ ಅಧಿಕಾರಿಗಳಿ ತಿಳಿಸಿದ್ದೇನೆ. ಇಂತಹ ಪ್ರಕರಣಗಳು ಗಮನಕ್ಕೆ ಬಂದರೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.