ADVERTISEMENT

ಬೊಮ್ಮಾಯಿ ಗೊಂಬೆಯಾಟ ಅಂತ್ಯ, ಬಿಜೆಪಿಯಲ್ಲಿ 3ನೇ ಸಿಎಂ ಕಾಲ ಸನ್ನಿಹಿತ: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಆಗಸ್ಟ್ 2022, 11:38 IST
Last Updated 9 ಆಗಸ್ಟ್ 2022, 11:38 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಬಂದುಹೋದ ಬೆನ್ನಲ್ಲೇ ನಾಯಕತ್ವ ಬದಲಾವಣೆ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ.

ಸದ್ಯ ಬಿಜೆಪಿಯಲ್ಲಿನ ರಾಜಕೀಯ ಬೆಳವಣಿಗೆಗಳನ್ನು ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರನ್ನು ಕೇಶವ ಕೃಪಾದವರು ‘ಸಂಘ ಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ’ ಎಂದು ವ್ಯಂಗ್ಯವಾಡಿದೆ.

‘ಆಡಿಸಿ ನೋಡು ಎಂದು ಗೊಂಬೆಯಂತಿದ್ದ #PuppetCM ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್. ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ ಅಥವಾ 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ’ ಈ ಬಗ್ಗೆ ಬಿಜೆಪಿಯವರೇ ಉತ್ತರಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ADVERTISEMENT

‘ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ 'ಕತ್ತಿ ವರಸೆ' ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ. ಬೊಮ್ಮಾಯಿ ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ ನಾಯಕರ ನಡುವಿನ ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ. ಶೇ 40ರಷ್ಟು ಕಮಿಷನ್ ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ. ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

‘ಸಿಎಂ ಬೊಮ್ಮಾಯಿ ಅವರೇ, ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ?, ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, ಶೇ 40ರಷ್ಟು ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ #PuppetCM ಮಾತ್ರವೇ? ಸಿಎಂ ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ’ ಎಂದು ಕಾಂಗ್ರೆಸ್ ಟೀಕಿಸಿದೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.