ADVERTISEMENT

ಕನ್ನಡ ಕಲಿಕೆ; ಸದ್ಯಕ್ಕೆ ಬಲವಂತದ ಕ್ರಮ ಬೇಡ -ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2021, 21:22 IST
Last Updated 13 ಡಿಸೆಂಬರ್ 2021, 21:22 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಪದವಿ ಶಿಕ್ಷಣ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶದ ಅನುಸಾರ ಸದ್ಯಕ್ಕೆ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಸರ್ಕಾರದ ಆದೇಶ ರದ್ದು ಕೋರಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠವು, ‘ರಾಜ್ಯ ಸರ್ಕಾರದ ಕ್ರಮದ ಬಗ್ಗೆ ಕೇಂದ್ರ ಸರ್ಕಾರ ಯಾವ ನಿಲುವು ತಳೆದಿದೆ ಎಂದು ಕೇಳಿತ್ತು. ಅಂತೆಯೇ, ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗಾಗಿ ಭಾಷೆ ಕಲಿಕೆ ಕಡ್ಡಾಯಗೊಳಿಸಬಹುದೇ ಎಂಬುದನ್ನು ಸ್ಪಷ್ಟಪಡಿಸಿ’ ಎಂದೂ ಕೇಂದ್ರ ಸರ್ಕಾರದ ಪರ ವಕೀಲರಿಗೆ ಸೂಚಿಸಿತ್ತು.

ADVERTISEMENT

ಸೋಮವಾರ ವಿಚಾರಣೆಗೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ನರಗುಂದ, ‘ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರದಿಂದ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಒದಗಿಸಲು ಒಂದಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.

ಕೋರಿಕೆ ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿಯ ಮುಂದಿನ ವಿಚಾರಣೆವರೆಗೆ ಕನ್ನಡ ಕಡ್ಡಾಯ ವಿಚಾರದಲ್ಲಿ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು’ ಎಂದು ಸರ್ಕಾರ ಹಾಗೂ ವಿವಿಗಳಿಗೆ ಸೂಚಿಸಿ ಇದೇ 16ಕ್ಕೆ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.