ಬೆಂಗಳೂರು: ಮುಡಾ ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದರೆ, ರಾಜಕೀಯ ಮತ್ತು ಕಾನೂನು ಹೋರಾಟ ನಡೆಸುವ ಕುರಿತು ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರಿಗೆ ಆಯೋಜಿಸಿದ್ದ ಉಪಾಹಾರ ಸಭೆಯಲ್ಲಿ ಚರ್ಚೆ ನಡೆದಿದೆ.
ಉಪಾಹಾರ ಸಭೆಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಶಾಸಕರೂ ಆಗಿರುವ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರಿಗೂ ಮುಖ್ಯಮಂತ್ರಿ ಆಹ್ವಾನ ನೀಡಿದ್ದು, ಅವರ ಉಪಸ್ಥಿತಿಯಲ್ಲಿ ಮುಡಾ ವಿಚಾರದಲ್ಲಿನ ಬೆಳವಣಿಗೆಗಳ ಕುರಿತು ಗಂಭೀರ ಸಮಾಲೋಚನೆ ನಡೆದಿದೆ.
ಮುಡಾ ವಿಚಾರದಲ್ಲಿ ರಾಜ್ಯಪಾಲರು ಉದ್ದೇಶಪೂರ್ವಕವಾಗಿ ನೋಟಿಸ್ ನೀಡಿದ್ದಾರೆ. ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನೂ ಈಗಾಗಲೇ ರಾಜ್ಯಪಾಲರಿಗೆ ನೀಡಲಾಗಿದೆ. ಆದರೂ ದುರುದ್ದೇಶಪೂರ್ವಕವಾಗಿ ಅವರು ನೋಟಿಸ್ ನೀಡಿದ್ದಾರೆ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಕಾನೂನು ಹೋರಾಟ ನಡೆಸುವುದೇ ಸೂಕ್ತ ಎಂಬ ಅಭಿಪ್ರಾಯವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಯ ಮಾತಿಗೆ ಸಚಿವರು ಸಹಮತ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.
ಬೇರೆ ರಾಜ್ಯಗಳಲ್ಲಿ ಮಾಡಿದಂತೆ ಕರ್ನಾಟಕದಲ್ಲೂ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ನಡೆಯುತ್ತಿದೆ ಮಹಾರಾಷ್ಟ್ರ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾಜಭವನ ದುರ್ಬಳಕೆ ಆಗಿದೆ. ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿದೆ. ಕೇಂದ್ರದ ಈ ಯತ್ನವನ್ನು ವಿಫಲಗೊಳಿಸಲು ರಾಜಕೀಯವಾಗಿ ಜೊತೆಗೆ ಕಾನೂನಾತ್ಮಕವಾಗಿ ತೀವ್ರ ಹೋರಾಟ ನಡೆಸುವ ಕುರಿತು ಸಮಾಲೋಚನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.