ADVERTISEMENT

ಕನ್ನಡಕ್ಕೆ ಕಾನೂನಿನ ಬಲ: ಮಸೂದೆ ಮಂಡನೆಗೆ ಸಿದ್ಧತೆ– ಮುಖ್ಯಮಂತ್ರಿ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 11:01 IST
Last Updated 14 ಸೆಪ್ಟೆಂಬರ್ 2022, 11:01 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ಎಲ್ಲ ಹಂತಗಳಲ್ಲಿ ಕನ್ನಡ ಕಡ್ಡಾಯಗೊಳಿಸುವುದಕ್ಕಾಗಿ ಕಾನೂನಿನ ಬಲ ನೀಡಲು ಇದೇ ಅಧಿವೇಶನದಲ್ಲಿ ಮಸೂದೆಯೊಂದನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಕಾನೂನಿನ ಮೂಲಕ ಕನ್ನಡ ಭಾಷೆ ಮತ್ತು ಕನ್ನಡದ ಜನರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ನೆಲೆಸಿರುವ ಅನ್ಯಭಾಷಿಕರು ಕನ್ನಡ ಕಲಿತುಕೊಳ್ಳಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

‘ಭಾರತ ಒಂದು ಒಕ್ಕೂಟ ರಾಷ್ಟ್ರ. ಅನೇಕ ಭಾಷೆಗಳು ಮತ್ತು ಸಂಸ್ಕೃತಿಗಳನ್ನು ಒಳಗೊಂಡ ದೇಶ. ಎಲ್ಲ ಮಾತೃಭಾಷೆಗಳೂ ರಾಷ್ಟ್ರೀಯ ಭಾಷೆಗಳೇ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಕನ್ನಡದ ರಕ್ಷಣೆ ಮತ್ತು ಬೆಳವಣಿಗೆಗೆ ಸರ್ಕಾರ ಸದಾ ಬದ್ಧವಾಗಿದೆ. ಈ ವಿಚಾರದಲ್ಲಿ ನಾವು ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜಕೀಯವನ್ನು ಮೀರಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ರಾಜ್ಯದಲ್ಲಿ ಕನ್ನಡ ಅಗ್ರಮಾನ್ಯ ಭಾಷೆಯಾಗಿ ಬಳಕೆ ಆಗುತ್ತದೆ’ ಎಂದು ಬೊಮ್ಮಾಯಿ ಹೇಳಿದರು.

ADVERTISEMENT

ಹೊಸ ಶಿಕ್ಷಣ ನೀತಿಯಲ್ಲಿ ಆಯಾಯ ರಾಜ್ಯ ಭಾಷೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ನಮ್ಮ ರಾಜ್ಯದಲ್ಲಿ ಕನ್ನಡದಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ ನಡೆಸಲಾಗುತ್ತದೆ. ಮೊದಲ ಬ್ಯಾಚ್‌ನ ಮೊದಲ ಸೆಮಿಸ್ಟರ್‌ ಪರೀಕ್ಷೆ ಕನ್ನಡದಲ್ಲಿಯೇ ನಡೆದಿದೆ ಎಂದು ಅವರು ತಿಳಿಸಿದರು.

ವಿಷಯ ಪ್ರಸ್ತಾಪಿಸಿದ ಜೆಡಿಎಸ್‌ ಸದಸ್ಯರು, ‘ರಾಜ್ಯದಲ್ಲಿ ಹಿಂದಿ ಹೇರಿಕೆ ಮಾಡಲಾಗುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಷಯ ಪ್ರಸ್ತಾಪಿಸಲು ಅವಕಾಶ ನೀಡಬೇಕು’ ಎಂದು ಏರಿದ ಧ್ವನಿಯಲ್ಲಿ ಒತ್ತಾಯಿಸಿದರು. ‘ಯಾರಾದರೂ ಒಬ್ಬರು ಮಾತನಾಡಿ, ಎಲ್ಲರೂ ಒಂದೇ ಸಲ ನಿಂತು ಮಾತನಾಡಿದರೆ ವಿಷಯ ಸ್ಪಷ್ಟವಾಗುವುದಿಲ್ಲ’ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದಾಗ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ, ‘ಹಿಂದಿಯನ್ನು ಬಲವಂತವಾಗಿ ಹೇರುವುದನ್ನು ವಿರೋಧಿಸುತ್ತೇವೆ. ಈ ಸಂಬಂಧ ಕೇಂದ್ರಕ್ಕೆ ಮನವಿ ಸಲ್ಲಿಸಬೇಕು’ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.