ADVERTISEMENT

ಉತ್ತರ ಕರ್ನಾಟಕದ ಲಿಂಗಾಯತ ನಾಯಕ ಮುಖ್ಯಮಂತ್ರಿಯಾಗಲಿ: ಜಯಮೃತ್ಯುಂಜಯ ಸ್ವಾಮೀಜಿ

ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನಿಲುವು

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 18:05 IST
Last Updated 22 ಜುಲೈ 2021, 18:05 IST
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರಿಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮನವಿ ಸಲ್ಲಿಸಿದರು. ಲಿಂಗಾಯತ ಪಂಚಮಸಾಲಿ ಸಮುದಾಯದ ಮುಖಂಡರಾದ ಕರಿಯಪ್ಪ, ಮಲ್ಲೇಶ್, ಅಮರೇಶ್ ಕರಡಿ, ಬಿ.ಎಸ್.ಪಾಟೀಲ್, ಶಿವಕುಮಾರ್ ಮೇಟಿ, ಆಯೋಗದ ಅರುಣ್ ಕುಮಾರ್, ರಾಜಶೇಖರ್, ಕಲ್ಯಾಣ್ ಕುಮಾರ್ ಹಾಗೂ ಇತರರು ಇದ್ದರು –ಪ್ರಜಾವಾಣಿ ಚಿತ್ರ
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರಿಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮನವಿ ಸಲ್ಲಿಸಿದರು. ಲಿಂಗಾಯತ ಪಂಚಮಸಾಲಿ ಸಮುದಾಯದ ಮುಖಂಡರಾದ ಕರಿಯಪ್ಪ, ಮಲ್ಲೇಶ್, ಅಮರೇಶ್ ಕರಡಿ, ಬಿ.ಎಸ್.ಪಾಟೀಲ್, ಶಿವಕುಮಾರ್ ಮೇಟಿ, ಆಯೋಗದ ಅರುಣ್ ಕುಮಾರ್, ರಾಜಶೇಖರ್, ಕಲ್ಯಾಣ್ ಕುಮಾರ್ ಹಾಗೂ ಇತರರು ಇದ್ದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ನಮ್ಮದು ತಟಸ್ಥ ನಿಲುವು. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆಗೆ ಹೈಕಮಾಂಡ್‌ ಸೂಚಿಸಿದರೆ, ಉತ್ತರ ಕರ್ನಾಟಕ ಭಾಗದಿಂದ ಲಿಂಗಾಯತ ಸಮುದಾಯದ ಹಾಗೂ ಭ್ರಷ್ಟನಲ್ಲದ ನಾಯಕನನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು’ ಎಂದು ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಒಬಿಸಿ (2ಎ) ಮೀಸಲಾತಿ ಕಲ್ಪಿಸುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದರು. ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವ ಮುನ್ನ ಭರವಸೆ ಈಡೇರಿಸಬೇಕು’ ಎಂದು ಆಗ್ರಹಿಸಿದರು.

‘ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಬೃಹತ್ ಪಾದಯಾತ್ರೆ ನಡೆಸಿದ್ದೆವು. ಮುಂದಿನ ಆರು ತಿಂಗಳಿನಲ್ಲಿ ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರಿಂದ ಪ್ರತಿಭಟನೆ ಕೈಬಿಡಲಾಯಿತು’ ಎಂದರು.

ADVERTISEMENT

‘ಈಗ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭುಗಿಲೆದ್ದಿದೆ. ಮುಖ್ಯಮಂತ್ರಿ ಬದಲಾದರೆ, ಮೀಸಲಾತಿ ಪ್ರಕ್ರಿಯೆ ಇನ್ನಷ್ಟು ವಿಳಂಬವಾಗಬಹುದು. ಹಾಗಾಗಿ, ಯಡಿಯೂರಪ್ಪ ಅವರು ತಮ್ಮ ಅವಧಿಯಲ್ಲೇ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ವಿಶೇಷ ಸಚಿವ ಸಂಪುಟ ಸಭೆ ಕರೆದು ನಮ್ಮ ಬೇಡಿಕೆ ಈಡೇರಿಸಬೇಕು’ ಎಂದೂ ಆಗ್ರಹಿಸಿದರು.

‘ವಿವಿಧ ಮಠಾಧೀಶರು ಯಡಿಯೂರಪ್ಪ ಅವರನ್ನು ಈಗಾಗಲೇ ಭೇಟಿಯಾಗಿದ್ದಾರೆ. ಮಠಾಧೀಶರು ಹೈಕಮಾಂಡ್ ಅಲ್ಲ. ಮಠಾಧೀಶರು ಸರ್ಕಾರಕ್ಕೆ ಸಲಹೆ ನೀಡಬಹುದೇ ಹೊರತು, ಆಡಳಿತಾತ್ಮಕ ವಿಚಾರಗಳಲ್ಲಿ ಆಗ್ರಹ ಮಾಡುವುದು ಸರಿಯಲ್ಲ. ಈ ವಿಚಾರದಲ್ಲಿ ನಾನು ತಟಸ್ಥ’ ಎಂದರು.

ಆಯೋಗಕ್ಕೆ ಮನವಿ:‘ಸಮುದಾಯವನ್ನು ಪ್ರವರ್ಗ 2ಎ ಪಟ್ಟಿಗೆ ಸೇರ್ಪಡೆ ಮಾಡುವ ಸಂಬಂಧ ಸರ್ಕಾರಕ್ಕೆ ಶೀಘ್ರವಾಗಿ ವರದಿ ಸಲ್ಲಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇವೆ. ಅವರು ಶೀಘ್ರವಾಗಿ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ’ ಎಂದುಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಾಳೆ ರಾಜ್ಯ ಕಾರ್ಯಕಾರಿಣಿ ಸಭೆ

‘ಜುಲೈ 24ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಪರಾಗ್‌ ಹೋಟೆಲ್‌ನಲ್ಲಿ ಲಿಂಗಾಯತ ಪಂಚಮಸಾಲಿ ಮೀಸಲಾತಿ ಚಳವಳಿಗಾರರ ರಾಜ್ಯ ಕಾರ್ಯಕಾರಿಣಿ ಸಭೆ ಕರೆಯಲಾಗಿದೆ. ಮೀಸಲಾತಿ ಸಂಬಂಧ ಮುಂದಿನ ಚಳವಳಿ ಕುರಿತುಸಭೆಯಲ್ಲಿ ಚರ್ಚಿಸಲಾಗುವುದು. ಸಭೆಯ ಮೂಲಕ ಸರ್ಕಾರದ ಮೇಲೆ ಒತ್ತಡ ತರಲಾಗುವುದು’ ಎಂದುಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.