ADVERTISEMENT

ಮತದಾನಕ್ಕೂ 48 ಗಂಟೆ ಮುನ್ನ ಮದ್ಯ ಮಾರಾಟ ನಿಷೇಧ ಅಗತ್ಯವೇ?: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2024, 16:04 IST
Last Updated 13 ಫೆಬ್ರುವರಿ 2024, 16:04 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಇದೇ 16ರಂದು ನಡೆಯಲಿರುವ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಮತದಾನದ ಮುನ್ನ 48 ಗಂಟೆಗಳ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿರುವ ಜಿಲ್ಲಾಧಿಕಾರಿ ಕ್ರಮ ಮೇಲ್ನೋಟಕ್ಕೆ ಅಷ್ಟೊಂದು ಸೂಕ್ತವಾಗಿಲ್ಲ’ ಎಂದು ಹೈಕೋರ್ಟ್‌ ಮೌಖಿಕವಾಗಿ ನುಡಿದಿದೆ.

ಈ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಇದೇ 1ರಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬೃಹತ್‌ ಬೆಂಗಳೂರು ಹೋಟೆಲ್‌ಗಳ ಸಂಘಟನೆಯ ಕಾರ್ಯದರ್ಶಿ ವೀರೇಂದ್ರ ಎನ್‌.ಕಾಮತ್‌ ಸೇರಿದಂತೆ ಒಟ್ಟು ನಾಲ್ವರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್ ಮಂಗಳವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಎಂ.ಅರುಣ್‌ ಶ್ಯಾಮ್‌, ‘ಈ ಉಪ ಚುನಾವಣೆ ಸಾರ್ವತ್ರಿಕ ಚುನಾವಣೆಯಲ್ಲ. ಇದರಲ್ಲಿ ಕೇವಲ 16 ಸಾವಿರ ಮತದಾರರು ಮತ ಚಲಾಯಿಸಲು ಅರ್ಹತೆ ಹೊಂದಿದ್ದಾರೆ. ಹೀಗಾಗಿ, 48 ಗಂಟೆಗಳ ಅವಧಿಯವರೆಗೆ ಮದ್ಯ ಮಾರಾಟ ನಿಷೇಧಿಸಿದರೆ ವರ್ತಕರು, ಉದ್ದಿಮೆದಾರರು ಸಾಕಷ್ಟು ತೊಂದರೆ ಅನುಭವಿಸಲಿದ್ದಾರೆ’ ಎಂದು ವಿವರಿಸಿದರು.

ADVERTISEMENT

‘ಪರಿಷತ್ತಿನ ಚುನಾವಣೆಯಲ್ಲಿ ಇಂತಹ ನಿಷೇಧದ ಅವಧಿಯನ್ನು ಬಾಂಬೆ ಹೈಕೋರ್ಟ್ ಒಂದು ದಿನಕ್ಕೆ ಸೀಮಿತಗೊಳಿಸಿರುವ ಪೂರ್ವನಿದರ್ಶನದ ತೀರ್ಪಿದೆ. ಹಾಗಾಗಿ, ಈ ಪ್ರಕರಣದಲ್ಲೂ ಕೇವಲ ಮತದಾನದ ದಿನದಂದು ಮಾತ್ರವೇ ನಿಷೇಧ ಅನ್ವಯಿಸಲು ನಿರ್ದೇಶಿಸಬೇಕು. ಅರ್ಜಿದಾರರು ಎಂದಿನಿಂತೆ ಉಳಿದ ಅವಧಿಯಲ್ಲಿ ಚಿಲ್ಲರೆ, ಸಗಟು ವ್ಯಾಪಾರ, ಹೋಟೆಲ್‌, ಬಾರ್ ಅಂಡ್‌ ರೆಸ್ಟೋರೆಂಟ್‌ಗಳನ್ನು ತೆರೆಯಲು ಅನುಮತಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಈ ಕುರಿತಂತೆ ಕಾನೂನು ಏನು ಹೇಳುತ್ತದೆ ಎಂಬುದನ್ನು ವಿವರಿಸಿ’ ಎಂದು ಸರ್ಕಾರದ ಪರ ವಕೀಲೆ ಸಾವಿತ್ರಮ್ಮ ಅವರಿಗೆ ಸೂಚಿಸಿ ವಿಚಾರಣೆಯನ್ನು ಇದೇ 14ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.