ADVERTISEMENT

ಜಿ.ಪಂ, ತಾ.ಪಂ ಮೀಸಲು ಪಟ್ಟಿ ಏ.1ರೊಳಗೆ: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2023, 1:50 IST
Last Updated 3 ಮಾರ್ಚ್ 2023, 1:50 IST
   

ಬೆಂಗಳೂರು: ‘ಏಪ್ರಿಲ್ 1ರ ಒಳಗಾಗಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿ ಪ್ರಕಟಿಸಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಜಿಲ್ಲಾ–ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆದ ಸರ್ಕಾರ, ಕರ್ನಾಟಕ ಪಂಚಾಯತ್‌ ರಾಜ್ ಸೀಮಾ ನಿರ್ಣಯ ಆಯೋಗಕ್ಕೆ ನೀಡಿತ್ತು. ಇದಕ್ಕಾಗಿ, ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿಯನ್ನು ಸರ್ಕಾರ ತಂದಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್‌ ಪ್ರಭುಲಿಂಗ ಕೆ.ನಾವದಗಿ ಅವರು ಈ ಕುರಿತ ಮಾಹಿತಿಯನ್ನು ನ್ಯಾಯಪೀಠಕ್ಕೆ ಒದಗಿಸಿದರು.

ಮಾಹಿತಿ ದಾಖಲಿಸಿಕೊಂಡ ನ್ಯಾಯಪೀಠ, ‘ಸರ್ಕಾರ ಮಾ. 1ರಂದು ಜಿಲ್ಲಾ, ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆಯ ಅಧಿಸೂಚನೆ ಹೊರಡಿಸಿದೆ. ಏ. 1ರೊಳಗೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲು ನಿಗದಿಪಡಿಸಿ ಅಧಿಸೂಚನೆ ಹೊರಡಿಸಿ ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಡಲಾಗುವುದು ಎಂದು ಅಡ್ವೊಕೇಟ್ ಜನರಲ್ ತಿಳಿಸಿದ್ದಾರೆ. ಚುನಾವಣೆ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್ ವಿಧಿಸಿದ ₹ 5 ಲಕ್ಷ ದಂಡವನ್ನೂ ಸರ್ಕಾರ ಪಾವತಿಸಿದೆ. ಕ್ಷೇತ್ರ ಮರು ವಿಂಗಡಣೆ ಅಧಿಸೂಚನೆಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗದ ಪರ ವಕೀಲರು ಕಾಲಾವಕಾಶ ಕೋರಿದ್ದಾರೆ. ಹಾಗಾಗಿ, ಅರ್ಜಿ ವಿಚಾರಣೆಯನ್ನು ಏಪ್ರಿಲ್‌ 12ಕ್ಕೆ ಮುಂದೂಡಲಾಗುತ್ತಿದೆ’ ಎಂದು ತಿಳಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.