ADVERTISEMENT

‘ಬೆಂಬಲ: ಸ್ಥಳೀಯ ನಾಯಕರ ವಿವೇಚನೆಗೆ’

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 16:34 IST
Last Updated 7 ಡಿಸೆಂಬರ್ 2021, 16:34 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ವಿಧಾನ ಪರಿಷತ್‌ನ 25 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಬೆಂಬಲ ನೀಡುವುದಿಲ್ಲ. ಆದರೆ, ಹೊಂದಾಣಿಕೆ ಅಥವಾ ಬೆಂಬಲ ನೀಡುವ ತೀರ್ಮಾನವನ್ನು ಸ್ಥಳೀಯ ಹಂತದ ನಾಯಕರಿಗೆ ನೀಡಲಾಗಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದರು. ದೂರವಾಣಿ ಕರೆ ಮಾಡಿಯೂ ನನ್ನೊಂದಿಗೆ ಚರ್ಚಿಸಿದ್ದರು. ಆದರೆ, ಯಾವುದೇ ಪಕ್ಷದ ಜತೆಗೆ ಹೊಂದಾಣಿಕೆ ಮಾಡಿಕೊಳ್ಳದೇ ಇರಲು ನಿರ್ಧರಿಸಲಾಗಿದೆ’ ಎಂದರು.

‘ನಾನು ಯಾವತ್ತೂ ಯಾವುದೇ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಕುರಿತು ಚರ್ಚಿಸಿಲ್ಲ. ಕೆಲವರು ನಮ್ಮ ಹೇಳಿಕೆಗಳನ್ನು ತಮಗೆ ಅನುಕೂಲವಾಗುವ ರೀತಿಯಲ್ಲಿ ಅರ್ಥೈಸಿ
ಕೊಂಡು, ವ್ಯಾಖ್ಯಾನಿಸಿದರು. ಚುನಾವಣೆ
ಯ ಆರಂಭದಲ್ಲೇ ಇಂತಹ ವಿಚಾರಗಳಲ್ಲಿ ನಿರ್ಧಾರಕ್ಕೆ ಬರಲಾಗದು. ಕೊನೆಯ ಹಂತದಲ್ಲೇ ತೀರ್ಮಾನಿಸಬೇಕು. ಅದಕ್ಕಾಗಿ ಈಗ ನಿಲುವನ್ನು ಸ್ಪಷ್ಟಪಡಿಸುತ್ತಿದ್ದೇನೆ’ ಎಂದು ತಿಳಿಸಿದರು.

ADVERTISEMENT

2023ರ ವಿಧಾನಸಭಾ ಚುನಾವಣೆಯೇ ಜೆಡಿಎಸ್‌ನ ಗುರಿ. ಆ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗಳಿಸುವುದಕ್ಕೆ ಅನುಕೂಲವಾಗುವ ರೀತಿಯಲ್ಲಿ ಪರಿಷತ್‌ ಚುನಾವಣೆಯಲ್ಲಿ ನಿರ್ಧಾರ ಕೈಗೊಳ್ಳುವಂತೆ ಸ್ಥಳೀಯ ಮುಖಂಡರಿಗೆ ಸೂಚಿಸಲಾಗಿದೆ. 2023ರ ಚುನಾವಣೆಯಲ್ಲಿ ಜೆಡಿಎಸ್‌ಗೆ ಹಿನ್ನಡೆ
ಯಾಗುವ ರೀತಿಯಲ್ಲಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಹೊಂದಾಣಿಕೆ
ಮಾಡಿಕೊಳ್ಳಬಾರದು ಎಂಬ ನಿರ್ದೇಶನವನ್ನೂ ನೀಡಲಾಗಿದೆ ಎಂದು ಹೇಳಿದರು.

ಜೆಡಿಎಸ್‌ ಅಭ್ಯರ್ಥಿಗಳು ಕಣದಲ್ಲಿರುವ ಆರು ಕ್ಷೇತ್ರಗಳಲ್ಲಿ ಮೂರೂ ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಇದೆ. ಇಲ್ಲಿ ಯಾರ ಬೆಂಬಲವನ್ನೂ ಜೆಡಿಎಸ್‌ ಪಡೆದಿಲ್ಲ. ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ರಾಯಚೂರು, ಕಲಬುರಗಿ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಶಕ್ತಿ ಜೆಡಿಎಸ್‌ಗೆ ಇದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಮತ್ತು ಕೆಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವ ತೀರ್ಮಾನವನ್ನು ಪಕ್ಷದ ಸ್ಥಳೀಯ ಮುಖಂಡರು ಕೈಗೊಂಡಿದ್ದಾರೆ. ಸಿಂಧನೂರು ಶಾಸಕ ವೆಂಕಟರಾವ್‌ ನಾಡಗೌಡ ತಮ್ಮ ಜತೆ ಚರ್ಚಿಸಿದ ಬಳಿಕವೇ ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದಾರೆ. ಇದರಲ್ಲಿ ಯಾವುದೇ ರಹಸ್ಯ ಇಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.