ADVERTISEMENT

ಲಾಕ್‌ಡೌನ್‌ ಉಲ್ಲಂಘಿಸಿ ಕಾರ್ಯಕ್ರಮ ಆಯೋಜಿಸಿದ ಸಚಿವ ಆನಂದ್‌ ಸಿಂಗ್‌ ಅತ್ತಿಗೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2020, 14:27 IST
Last Updated 7 ಏಪ್ರಿಲ್ 2020, 14:27 IST
   

ಹೊಸಪೇಟೆ: ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಅದನ್ನು ಲೆಕ್ಕಿಸದೆ ಬಿಜೆಪಿ ಮಹಿಳಾ ಮೋರ್ಚಾದಿಂದ ಮಂಗಳವಾರ ನಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರ ಅತ್ತಿಗೆ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಕವಿತಾ ಈಶ್ವರ್‌ ಸಿಂಗ್‌ ಅವರು, ಲೌಕ್‌ಡೌನ್‌ ನಡುವೆ ಕೆಲಸ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಇಲ್ಲಿನ ಆರೋಗ್ಯ ಅಧಿಕಾರಿ ಕಚೇರಿಯ ಪ್ರಾಂಗಣದಲ್ಲಿ ಸೇರಿಸಿ, ಅವರ ಮೇಲೆ ಹೂಮಳೆ ಸುರಿಸಿ ಅಭಿನಂದನೆ ಸಲ್ಲಿಸಿದರು. ನಂತರ ಎಲ್ಲರಿಗೂ ಬಿಸ್ಕತ್‌ ವಿತರಿಸಿದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್‌, ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಂಕರ್‌ ಮೇಟಿ ಸೇರಿದಂತೆ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.

ADVERTISEMENT

‘ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ನಗರವನ್ನು ಸೋಂಕು ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ಈಗಾಗಲೇ ನಿಷೇಧಾಜ್ಞೆ ಹೇರಲಾಗಿದೆ. ಜನ ಏಕಾಂಗಿ ಹೊರಗೆ ಓಡಾಡಲು ಬಿಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ಇಷ್ಟೊಂದು ಜನ ಸೇರಿ ಕಾರ್ಯಕ್ರಮ ಆಯೋಜಿಸಿದ್ದರೂ ಜಿಲ್ಲಾಡಳಿತ ಮೌನ ವಹಿಸಿದ್ದು ಸರಿಯಲ್ಲ. ಅರಣ್ಯ ಸಚಿವರ ಅತ್ತಿಗೆ ಎಂಬ ಕಾರಣಕ್ಕೆ ಅವರಿಗೆ ವಿನಾಯಿತಿ ನೀಡಿರುವುದು ಸರಿಯಲ್ಲ. ನಿಯಮ ಉಲ್ಲಂಘಿಸುವವರ ಕೂಡಲೇ ಕ್ರಮ ಜರುಗಿಸಬೇಕು’ ಎಂದು ಸಾಮಾಜಿಕ ಹೋರಾಟಗಾರ ಲಕ್ಷ್ಮಣ, ಸಂತೋಷ್‌ ಆಗ್ರಹಿಸಿದ್ದಾರೆ.

ಈ ಸಂಬಂಧ ಉಪವಿಭಾಗಾಧಿಕಾರಿ ಶೇಖ್‌ ತನ್ವೀರ್‌ ಆಸಿಫ್‌ ಅವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದಾಗ ಅವರು ಮಾಹಿತಿಗೆ ಲಭ್ಯರಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.