ADVERTISEMENT

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್‌ ಚಿಟ್‌?

​ಪ್ರಜಾವಾಣಿ ವಾರ್ತೆ
Published 23 ಜನವರಿ 2025, 20:28 IST
Last Updated 23 ಜನವರಿ 2025, 20:28 IST
<div class="paragraphs"><p>ಮುಖ್ಯಮಂತ್ರಿ&nbsp;ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಲೋಕಾಯುಕ್ತ ಪೊಲೀಸರು ಕ್ಲೀನ್‌ಚಿಟ್‌ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. 

ADVERTISEMENT

‘ಪ್ರಕರಣದಲ್ಲಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರು ಪ್ರಭಾವ ಬೀರಿರುವುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ. ಆದರೆ, ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡುವಲ್ಲಿ ಮುಡಾ ಅಧಿಕಾರಿಗಳಿಂದ ಸಾಲು–ಸಾಲು ಅಕ್ರಮಗಳು ನಡೆದಿವೆ’ ಎಂಬ ಮಾಹಿತಿ ವಿವಿಧ ಸುದ್ದಿವಾಹಿನಿಗಳಲ್ಲಿ ಬಿತ್ತರವಾಗಿದೆ. ‘ಈ ಬಗ್ಗೆ ನನಗೇನೂ ಮಾಹಿತಿ ಇಲ್ಲ’ ಎಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

‍ಪಾರ್ವತಿ ಅವರಿಗೆ ಮುಡಾ 50:50ರ ಅನುಪಾತದಲ್ಲಿ 14 ಪರಿಹಾರ ನಿವೇಶನಗಳನ್ನು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್‌ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತನಿಖಾ ವರದಿಯನ್ನು ಇದೇ 27ರ ಒಳಗೆ ಸಲ್ಲಿಸಬೇಕು ಎಂದು ನ್ಯಾಯಾಲಯವು ತನಿಖಾಧಿಕಾರಿಗೆ ಸೂಚಿಸಿತ್ತು. ಉದೇಶ್‌ ಅವರ ತಂಡವು ಸಿದ್ಧಪಡಿಸಿರುವ ವರದಿಯನ್ನು ಲೋಕಾಯುಕ್ತದ ಬೆಂಗಳೂರು ಕೇಂದ್ರ ಕಚೇರಿಗೆ ಈಚೆಗೆ ಸಲ್ಲಿಸಲಾಗಿದೆ ಎಂಬ ಮಾಹಿತಿಯನ್ನು ವಾಹಿನಿಗಳು ಬಿತ್ತರಿಸಿವೆ.

ಕೇಂದ್ರ ಕಚೇರಿಗೆ ವರದಿ ಸಲ್ಲಿಸುವುದಕ್ಕೂ ಮುನ್ನ, ಅದರಲ್ಲಿ ಉಲ್ಲೇಖಿಸಲಾದ ಅಂಶಗಳು ಮತ್ತು ದಾಖಲೆಗಳನ್ನು ಎಸ್‌ಪಿ ಉದೇಶ್ ಅವರು ಸ್ವತಃ ಪರಿಶೀಲಿಸಿದ್ದಾರೆ ಎನ್ನಲಾಗಿದೆ. ವರದಿ ಇನ್ನಷ್ಟೇ ನ್ಯಾಯಾಲಯಕ್ಕೆ ಸಲ್ಲಿಕೆಯಾಗಬೇಕಿದೆ.

ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಮೊದಲನೇ ಆರೋಪಿ ಮತ್ತು ಅವರ ಪತ್ನಿ ಪಾರ್ವತಿ ಅವರನ್ನು ಎರಡನೇ ಆರೋಪಿಯನ್ನಾಗಿಸಿ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ವಿರೋಧ ಪಕ್ಷಗಳ ನಾಯಕರು, ಕೆಲ ಸಾಮಾಜಿಕ ಕಾರ್ಯಕರ್ತರು ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿದ್ದರು. ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಮತ್ತು ಕಾರ್ಯಕರ್ತರು ಬೆಂಗಳೂರಿನ ಕೆಂಗೇರಿಯಿಂದ ಮೈಸೂರಿನ ಮುಡಾ ಕಚೇರಿವರೆಗೂ ಪಾದಯಾತ್ರೆ ನಡೆಸಿದ್ದರು.

‘ನಿವೇಶನ ಹಂಚಿಕೆಯಲ್ಲಿ ಸಿದ್ದರಾಮಯ್ಯ ಅವರ ಪ್ರಭಾವ ಬಳಕೆಯಾಗಿಲ್ಲ ಎಂದು ಲೋಕಾಯುಕ್ತ ವರದಿಯಲ್ಲಿದೆ’ ಎಂದು ಮೂಲಗಳು ದೃಢಪಡಿಸಿವೆ.

ಆದರೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಹ ತನಿಖೆ ನಡೆಸುತ್ತಿದ್ದು, ನಿವೇಶನ ಹಂಚಿಕೆಯಲ್ಲಿ ಅವರ ಪ್ರಭಾವ ಬಳಕೆಯಾಗಿದೆ ಎಂದು ತನ್ನ ಎರಡು ಪತ್ರಿಕಾ ಪ್ರಕಟಣೆಗಳಲ್ಲಿ ತಿಳಿಸಿದೆ. ಹೀಗಾಗಿ ಮುಖ್ಯಮಂತ್ರಿ ಅವರ ಮೇಲೆ ಇ.ಡಿ ತನಿಖೆಯ ಕತ್ತಿ ಇದ್ದೇ ಇದೆ.

ಜಾರಿ ನಿರ್ದೇಶನಾಲಯವು ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಜತೆಗೆ 50:50 ಅನುಪಾತದಲ್ಲಿ ಪರಿಹಾರ ನಿವೇಶನಗಳನ್ನು ಹಂಚಿಕೆ ಮಾಡಲಾದ ಇತರ ಎಲ್ಲ ಪ್ರಕರಣಗಳನ್ನೂ ಪರಿಶೀಲಿಸುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಹಿಂದಿನ ವಾರ, ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಮತ್ತು ಮುಡಾ ಅಧಿಕಾರಿಗಳಾಗಿದ್ದವರ 142 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಜತೆಗೆ ಇತರ 631 ನಿವೇಶನಗಳ ಮಾಹಿತಿ ನೀಡುವಂತೆ ಮುಡಾಗೆ ಪತ್ರ ಬರೆದಿತ್ತು. 

ಮುಡಾ ಪ್ರಕರಣ ಮುಚ್ಚಿಹಾಕಲು ಯತ್ನ: ಅಶೋಕ

‘ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದರೂ ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಹಗರಣ ಮುಚ್ಚಿ ಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನಿಸುತ್ತಿದ್ದಾರೆ’ ಎಂದು ವಿರೋಧಪಕ್ಷದ ನಾಯಕ ಆರ್‌.ಅಶೋಕ ಆರೋಪಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಹಗರಣದಲ್ಲಿ ಮುಖ್ಯಮಂತ್ರಿಯವರ ಪಾತ್ರವನ್ನು ಮುಚ್ಚಿಹಾಕುವ ಪ್ರಯತ್ನ ವಿರೋಧಿಸಿ ಬಿಜೆಪಿ ಮತ್ತೆ ಹೋರಾಟ ಮುಂದುವರಿಸಲಿದೆ’ ಎಂದರು.

‘ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಎಸ್‌ಐಟಿ ಕ್ಲೀನ್‌ ಚಿಟ್‌ ನೀಡಿರುವಾಗ ಮುಖ್ಯಮಂತ್ರಿಗೆ ಕ್ಲೀನ್‌ ಚಿಟ್‌ ನೀಡುವುದು ಖಚಿತ. ಆದ್ದರಿಂದ ತನಿಖೆಯನ್ನು ಸಿಬಿಐಗೆ ವಹಿಸುವವರೆಗೂ ಹೋರಾಟ ಮಾಡುತ್ತೇವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.