ಕರ್ನಾಟಕ ಲೋಕಾಯುಕ್ತ
(ಸಾಂಕೇತಿಕ ಚಿತ್ರ)
ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ, ಭ್ರಷ್ಟಾಚಾರ ಆರೋಪ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು, ನೌಕರರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತವು ಕಳುಹಿಸಿರುವ 105 ಪ್ರಕರಣಗಳು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಇವೆ.
ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳ ಒಳಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ಕೈಗೊಂಡ ಕ್ರಮದ ಮಾಹಿತಿಯನ್ನು ನೀಡುವಂತೆ ಇಲಾಖೆಗಳನ್ನು ಕೋರಲು ಅನುಮೋದನೆ ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (ಡಿಪಿಎಆರ್) ಸಚಿವ ಸಂಪುಟ ಸಭೆಗೆ ಪ್ರಸ್ತಾವ ಸಲ್ಲಿಸಿದೆ.
ಅಧಿಕಾರಿ, ನೌಕರರ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆ 1988ರ ಕಲಂ 19ರಡಿ ಪ್ರಾಸಿಕ್ಯೂಷನ್‌ಗೆ ಮಂಜೂರಾತಿ ನೀಡುವಂತೆ ವಿವಿಧ ಇಲಾಖೆಗಳಿಗೆ (ಸಕ್ಷಮ ಪ್ರಾಧಿಕಾರಗಳು) ಲೋಕಾಯುಕ್ತವು ಪ್ರಸ್ತಾವ ಸಲ್ಲಿಸುತ್ತಿದೆ. ಆದರೆ, ಈ ಪ್ರಸ್ತಾವಗಳನ್ನು ಪರಿಶೀಲಿಸಿ ಮಂಜೂರಾತಿ ನೀಡುವ ಅಥವಾ ತಿರಸ್ಕರಿಸುವ ಕುರಿತು ನಿರ್ಣಯ ತೆಗೆದುಕೊಳ್ಳುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿವೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸರ್ಕಾರಿ ನೌಕರರ ವಿರುದ್ಧ ದಾಖಲಾಗುವ ಪ್ರಕರಣಗಳಲ್ಲಿ ಮೂರು ತಿಂಗಳ ಒಳಗೆ ಸಂಬಂಧಿಸಿದ ಇಲಾಖೆಗಳು ಪ್ರಾಸಿಕ್ಯೂಷನ್ ಮಂಜೂರಾತಿ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಕಾಲಮಿತಿ ನಿಗದಿಪಡಿಸಿದೆ. ಎಲ್ಲ ಇಲಾಖೆಗಳು ಸುಪ್ರೀಂ ಕೋರ್ಟ್‌ನ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ ಎಂದು ಡಿಪಿಎಆರ್ ಮೂಲಗಳು ತಿಳಿಸಿವೆ.
2024ರ ಸೆ. 21ರಂದು ಸರ್ಕಾರಕ್ಕೆ ಪತ್ರ ಬರೆದಿದ್ದ ಲೋಕಾಯುಕ್ತ, ಒಟ್ಟು 525 ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಮಂಜೂರಾತಿ ಕೋರಿ ಸಕ್ಷಮ ಪ್ರಾಧಿಕಾರಗಳಿಗೆ ಪತ್ರ ಬರೆದಿದ್ದನ್ನು ಉಲ್ಲೇಖಿಸಿತ್ತು. ಆ ಪಟ್ಟಿಯಲ್ಲಿನ 328 ಪ್ರಕರಣಗಳಲ್ಲಿ ಸಂಬಂಧಿಸಿದ ಇಲಾಖೆಗಳು ಈಗಾಗಲೇ ಪ್ರಾಸಿಕ್ಯೂಷನ್ ಮಂಜೂರಾತಿ ನೀಡಿವೆ. ಆರು ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. 191 ಪ್ರಕರಣಗಳು ಬಾಕಿ ಇದ್ದವು.
‘ಈ 191 ಪ್ರಕರಣಗಳ ಮಾಹಿತಿಯನ್ನು 2024 ಅ. 28 ಮತ್ತು 2025ರ ಜ. 24ರಂದು ನಡೆದ ಸಚಿವ ಸಂಪುಟ ಸಭೆಗೆ ಒದಗಿಸಲಾಗಿತ್ತು. ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ತುರ್ತಾಗಿ ಕ್ರಮ ಕೈಗೊಂಡು, ಆ ಮಾಹಿತಿಯನ್ನು ನೀಡುವಂತೆ ಹಲವು ಬಾರಿ ಅನಧಿಕೃತ ಟಿಪ್ಪಣಿ, ಪತ್ರಗಳ ಮೂಲಕ ಮನವಿ ಮಾಡಲಾಗಿತ್ತು. ಜ. 24ರಂದು ನಡೆದ ಸಚಿವ ಸಂಪುಟ ಸಭೆಗೆ ಒಟ್ಟು 127 ಪ್ರಕರಣಗಳು ಪ್ರಾಸಿಕ್ಯೂಷನ್ ಮಂಜೂರಾತಿಗೆ ಬಾಕಿ ಇರುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಪ್ರಾಸಿಕ್ಯೂಷನ್‌ಗೆ ಪ್ರಕರಣಗಳು ಬಾಕಿ ಇರುವುದಕ್ಕೆ ಅಂದಿನ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ, ಒಂದು ತಿಂಗಳ ಒಳಗೆ ಈ ವಿಷಯದಲ್ಲಿ ಪ್ರಗತಿ ಸಾಧಿಸಬೇಕು ಮತ್ತು ಪ್ರಗತಿಯ ಮಾಹಿತಿಯನ್ನು ನೀಡಬೇಕು ಎಂದು ಸೂಚನೆ ನೀಡಿದ್ದರು. ಆದರೂ ಇನ್ನೂ 105 ಪ್ರಕರಣಗಳು ಬಾಕಿ ಇವೆ’ ಎಂದೂ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.