ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಗುತ್ತಿಗೆದಾರರೊಬ್ಬರ ಬಿಲ್ ಪಾಸು ಮಾಡಲು ₹10 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬಿಬಿಎಂಪಿಯ ಕಾರ್ಯಪಾಲಕ ಎಂಜಿನಿಯರ್ ಎಚ್.ವಿ.ಯರಪ್ಪ ರೆಡ್ಡಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
‘ಗುತ್ತಿಗೆದಾರ ಹೇಮಂತ್ ಜಿ.ಎಂ. ಅವರು ಬಿಬಿಎಂಪಿಯ ಸಿ.ವಿ.ರಾಮನ್ ನಗರ ವಿಭಾಗದಲ್ಲಿ ಹಲವು ಕಾಮಗಾರಿಗಳನ್ನು ನಡೆಸಿದ್ದು, ಬಿಲ್ ಪಾವತಿ ಬಾಕಿ ಇದೆ. ಬಿಲ್ ಪಾವತಿಗೆ ಕ್ರಮ ತೆಗೆದುಕೊಳ್ಳುವಂತೆ ಕಾರ್ಯಪಾಲಕ ಎಂಜಿನಿಯರ್ ಯರಪ್ಪ ರೆಡ್ಡಿ ಅವರನ್ನು ಭೇಟಿ ಮಾಡಿದಾಗ, ₹10 ಲಕ್ಷ ಲಂಚ ನೀಡುವಂತೆ ಬೇಡಿಕೆ ಸಲ್ಲಿಸಿದ್ದರು’ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.
‘ಗುತ್ತಿಗೆದಾರ ಹೇಮಂತ್ ಅವರು ನೀಡಿದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು. ಅದರಂತೆ ಹೇಮಂತ್ ಅವರು ಬುಧವಾರ ಯರಪ್ಪ ರೆಡ್ಡಿ ಅವರನ್ನು ಭೇಟಿ ಮಾಡಿ ₹10 ಲಕ್ಷ ನೀಡಿದ್ದರು. ಆಗ ದಾಳಿ ನಡೆಸಿ, ಅವರನ್ನು ಬಂಧಿಸಲಾಯಿತು’ ಎಂದು ಮಾಹಿತಿ ನೀಡಿದೆ.
‘ಲೋಕಾಯುಕ್ತ ಡಿವೈಎಸ್‌ಪಿ ಬಿ.ಎಲ್.ಶ್ರೀನಿವಾಸಮೂರ್ತಿ, ನೇತೃತ್ವದಲ್ಲಿ ಪಿ.ಐಗಳಾದ ಎಚ್.ಎಂ.ಆನಂದ್, ಗೋವಿಂದರಾಜು ಮತ್ತು ಇತರ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿಯಿಂದ ₹10 ಲಕ್ಷ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.