ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಕರಾವಳಿಯಲ್ಲಿ ತಾಪಮಾನ ಹೆಚ್ಚಳವಾಗಿದ್ದು, ದಕ್ಷಿಣ ಕನ್ನಡದ ಸುಳ್ಯದಲ್ಲಿ ಗರಿಷ್ಠ ಉಷ್ಣಾಂಶ (41.4 ಡಿಗ್ರಿ ಸೆಲ್ಸಿಯಸ್) ಮಂಗಳವಾರ ದಾಖಲಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಪ್ರಕಾರ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ತಲಾ 10 ಕಡೆ, ಉಡುಪಿಯ ಎರಡು ಕಡೆ ಹಾಗೂ ಕೊಡಗು ಜಿಲ್ಲೆಯ ಒಂದು ಕಡೆ ಗರಿಷ್ಠ ಉಷ್ಣಾಂಶವು 38 ಡಿಗ್ರಿ ಸೆಲ್ಸಿಯಸ್‌ನಿಂದ 41 ಡಿಗ್ರಿ ಸೆಲ್ಸಿಯಸ್‌ವರೆಗೆ ವರದಿಯಾಗಿದೆ. ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳು 2ರಿಂದ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಕೇಂದ್ರ ತಿಳಿಸಿದೆ.
ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಬುಧವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಕೆಲವೆಡೆ ಮಂಗಳವಾರ ಸಂಜೆ ತುಂತುರು ಮಳೆ ಸುರಿದಿದೆ. ಇದು ಈ ವರ್ಷದ ಮೊದಲ ಮಳೆಯಾಗಿದೆ. ಬುಧವಾರ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.