ADVERTISEMENT

LS polls: ಕಲಬುರಗಿಯಿಂದಲೇ ಮಲ್ಲಿಕಾರ್ಜುನ ಖರ್ಗೆ ಕಣಕ್ಕೆ? ಡಿಕೆಶಿ ಹೇಳಿದ್ದೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಮಾರ್ಚ್ 2024, 11:35 IST
Last Updated 8 ಮಾರ್ಚ್ 2024, 11:35 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ. ಶಿವಕುಮಾರ್</p></div>

ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ. ಶಿವಕುಮಾರ್

   

ನವದೆಹಲಿ: ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಲುವಾಗಿ ಕಾಂಗ್ರೆಸ್‌ ಉನ್ನತ ನಾಯಕರು ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರವೂ ಕಸರತ್ತು ನಡೆಸಿದ್ದಾರೆ.

ಸದ್ಯ ದೆಹಲಿಯಲ್ಲಿ ಬೀಡು ಬಿಟ್ಟಿರುವ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಕುರಿತು ಹೈಕಮಾಂಡ್ ನಾಯಕರೊಂದಿಗೆ ಸಮಲೋಚನೆ ನಡೆಸಿದ್ದಾರೆ.

ADVERTISEMENT

ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳ ನಡುವೆಯೇ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಮಾತ್ರ ಪ್ರಸ್ತಾಪಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಅವರು ತಮ್ಮ ಭದ್ರಕೋಟೆಯಿಂದಲೇ ಸ್ಪರ್ಧಿಸಬೇಕು ಎಂದು ಅವರ ಬೆಂಬಲಿಗರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು (ಮಲ್ಲಿಕಾರ್ಜುನ ಖರ್ಗೆ) ಹೆಸರನ್ನು ಪ್ರಸ್ತಾಪಿಸಲಾಗಿದೆ. ಆದರೆ, ಚುನಾವಣೆಗೆ ಸ್ಪರ್ಧಿಸುವ ಕುರಿತು ಖರ್ಗೆ ಅವರೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಡಿಕೆಶಿ ತಿಳಿಸಿದ್ದಾರೆ.

‘ಕಲಬುರಗಿ ಕ್ಷೇತ್ರದಿಂದ ಒಬ್ಬರ ಹೆಸರನ್ನು ಮಾತ್ರ ಪ್ರಸ್ತಾಪಿಸಲಾಗಿದೆ. ಪಕ್ಷದ ಅಧ್ಯಕ್ಷರಾದ ಖರ್ಗೆ ಅವರಿಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ದೇಶದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಅವರೇ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಡಿಕೆಶಿ ಹೇಳಿದ್ದಾರೆ.

82 ವರ್ಷದ ಖರ್ಗೆ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿಯಲ್ಲಿ ಸೋತಿದ್ದಾರೆ. ಇದು ಅವರ ಐದು ದಶಕಗಳಲ್ಲಿ ರಾಜಕೀಯ ಜೀವನದಲ್ಲಿ ಎದುರಾದ ಮೊದಲ ಚುನಾವಣಾ ಸೋಲಾಗಿತ್ತು. ಇದಾದ ಬಳಿಕ ಅವರು ಪಕ್ಷದ ಅಧ್ಯಕ್ಷರಾಗಿ, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಕರ್ತವ್ಯ ನಿರ್ವಹಿಸಿದ್ದರು.

11 ಕ್ಷೇತ್ರ: ‘ಕೈ’ ಅಭ್ಯರ್ಥಿಗಳು ಅಂತಿಮ

ನವದೆಹಲಿ: ಕರ್ನಾಟಕದ 11 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಅಂತಿಮಗೊಳಿಸಿದೆ. ಇಂದು ಅಥವಾ ನಾಳೆ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಅನುಮೋದನೆ ನೀಡಲಾಗಿದೆ.

ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಸಭೆ ನಡೆಸಿ 13ರಿಂದ 14 ಕ್ಷೇತ್ರಗಳಿಗೆ ಸಂಭಾವ್ಯರ ಹೆಸರನ್ನು ಅಂತಿಮಗೊಳಿಸಿದ್ದರು. ದೆಹಲಿಯಲ್ಲಿ ಗುರುವಾರ ನಡೆದ ಚುನಾವಣಾ ಸಮಿತಿ ಸಭೆಯಲ್ಲಿ 11 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲಾಯಿತು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಡಿ.ಕೆ. ಸುರೇಶ್ ಕಣಕ್ಕಿಳಿಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.