ADVERTISEMENT

ಮತದಾರರಿಗೆ ಆಮಿಷ: ಎಫ್‌ಐಆರ್‌ ರದ್ದುಕೋರಿ ಡಿಕೆಶಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 16:22 IST
Last Updated 23 ಏಪ್ರಿಲ್ 2024, 16:22 IST
<div class="paragraphs"><p> ಡಿಕೆಶಿ</p></div>

ಡಿಕೆಶಿ

   

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಆಮಿಷವೊಡ್ಡಿದ್ದಾರೆ ಎಂಬ ಆರೋಪದಡಿ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಜರುಗಿಸಲು ಇದೇ 19ರಂದು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಹೊರಡಿಸಿರುವ ಆದೇಶ ಮತ್ತು ಇದನ್ನು ಆಧರಿಸಿ ಆರ್‌ಎಂಸಿ ಯಾರ್ಡ್‌ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸಬೇಕು’ ಎಂದು ಕೋರಿ ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಈ ಕ್ರಿಮಿನಲ್‌ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಚಾರಿ ವಿಚಕ್ಷಣಾ ತಂಡದ ಮುಖ್ಯಸ್ಥ ಬಿ.ಕೆ.ದಿನೇಶ್‌ ಕುಮಾರ್‌ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ.

ಪ್ರಕರಣವೇನು?: ರಾಜರಾಜೇಶ್ವರಿ ನಗರದ ಅಪಾರ್ಟ್‌ಮೆಂಟ್‌ ನಿವಾಸಿಗಳೊಂದಿಗೆ ಚುನಾವಣಾ ಪ್ರಚಾರ ಸಭೆ ನಡೆಸಿದ್ದ ಡಿ.ಕೆ.ಶಿವಕುಮಾರ್‌, ‘ಅಪಾರ್ಟ್‌ಮೆಂಟ್‌ಗೆ ಸಿಎ ನಿವೇಶನ ನೀಡಬೇಕು ಹಾಗೂ ಕಾವೇರಿ ನೀರು ಒದಗಿಸಬೇಕು ಎಂದು ನಿವಾಸಿಗಳು ಬೇಡಿಕೆಯಿಟ್ಟಿದ್ದಾರೆ. ಕಾಂಗ್ರೆಸ್‌ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಗೆ (ಡಿ.ಕೆ.ಸುರೇಶ್‌) ಮತ ನೀಡಿದರೆ ನಿಮ್ಮ ಬೇಡಿಕೆಯನ್ನು ಎರಡು ಮೂರು ತಿಂಗಳಲ್ಲಿ ಈಡೇರಿಸುತ್ತೇನೆ. ಇಲ್ಲವಾದರೆ ನನ್ನನ್ನು ಏನೂ ಕೇಳಬೇಡಿ’ ಎಂದು ಮಾತನಾಡಿದ್ದ ವಿಡಿಯೊ ತುಣುಕು ಬಹಿರಂಗವಾಗಿತ್ತು. 

ಈ ಹಿನ್ನೆಲೆಯಲ್ಲಿ ದಿನೇಶ್‌ ಕುಮಾರ್‌ ಅವರು, ಚುನಾವಣಾ ಸಂಹಿತೆ ಉಲ್ಲಂಘನೆ ಆರೋಪದಡಿ ಶಿವಕುಮಾರ್ ವಿರುದ್ಧ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಇದೇ 19ರಂದು ಖಾಸಗಿ ದೂರು ದಾಖಲಿಸಿದ್ದರು. ನ್ಯಾಯಾಲಯದ ಆದೇಶದ ಅನ್ವಯ ಆರ್‌ಎಂಸಿ ಯಾರ್ಡ್‌ ಠಾಣಾ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.