ಸಿದ್ದರಾಮಯ್ಯ
ಹುಬ್ಬಳ್ಳಿ: 'ಗೋವಾದ ರಾಜಕೀಯಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ಅವರು ಮಹದಾಯಿ ಯೋಜನೆಗೆ ಪರಿಸರ ಇಲಾಖೆಯಿಂದ ಅನುಮತಿ ಕೊಡಿಸಲು ಹಿಂದೇಟು ಹಾಕುತ್ತಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯ ಸರ್ಕಾರವು ಮಹದಾಯಿ ಯೋಜನೆ ಆರಂಭಿಸಬೇಕೆಂದರೆ, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯಬೇಕಿದೆ. ಆದರೆ, ಕೇಂದ್ರ ಸರ್ಕಾರ ಈ ವಿಷಯದಲ್ಲಿ ನಿಷ್ಕಾಳಜಿ ತೋರಿಸುತ್ತಿದೆ. ಅದೊಂದು ಅನುಮತಿ ದೊರೆತರೆ ತಕ್ಷಣ ಕಾಮಗಾರಿ ಆರಂಭಿಸುತ್ತೇವೆ' ಎಂದರು.
'ಪರಿಸರ ಇಲಾಖೆ ಅನುಮತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಸಚಿವರನ್ನು ಸಾಕಷ್ಟು ಬಾರಿ ಭೇಟಿಯಾಗಿ ವಿನಂತಿಸಿದ್ದೇವೆ. ಪ್ರಲ್ಹಾದ ಜೋಶಿ ಅವರು ಸಹ ಕೇಂದ್ರದ ಪ್ರಮುಖ ಸಚಿವರಾಗಿದ್ದು, ರಾಜ್ಯದ ಒಳಿತಿಗೆ ಅನುಮತಿ ಕೊಡಿಸುವ ಕೆಲಸ ಮಾಡಬಹುದಿತ್ತು. ಆದರೆ, ಅದು ಬಿಟ್ಟು ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತ ದಿನ ಕಳೆಯುತ್ತಿದ್ದಾರೆ. ಮಹದಾಯಿ ಕುರಿತು ಯಾವ ಮಾತು ಆಡುತ್ತಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.
'ಮೇ 20ಕ್ಕೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಲಿದ್ದು, ವಿಜಯನಗರದಲ್ಲಿ ಸಮಾವೇಶ ಹಮ್ಮಿಕೊಂಡಿದ್ದೇವೆ. ಅಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಯನ್ನು ವಿವರಿಸುತ್ತೇವೆ' ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.