ADVERTISEMENT

ತಿಮರೋಡಿ ತಲೆ ಮರೆಸಿಕೊಂಡಿದ್ದಾರೆ: ಹೈಕೋರ್ಟ್‌ಗೆ ಮಾಹಿತಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 15:36 IST
Last Updated 8 ಅಕ್ಟೋಬರ್ 2025, 15:36 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಯ ಗಡಿಪಾರು ಆದೇಶ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಸದ್ಯ ತಲೆ ಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ’ ಎಂದು ಅಡ್ವೊಕೇಟ್‌ ಜನರಲ್‌ ಹೈಕೋರ್ಟ್‌ಗೆ ಅರುಹಿದರು.

ತಮ್ಮನ್ನು ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ತಿಮರೋಡಿ ಪರ ಹೈಕೋರ್ಟ್‌ ವಕೀಲ ಎಂ.ಆರ್.ಬಾಲಕೃಷ್ಣ, ‘ಅರ್ಜಿದಾರರು ನಿರೀಕ್ಷಣಾ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದೇ 9ರಂದು ವಿಚಾರಣೆಗೆ ನಿಗದಿಯಾಗಿದೆ. ಆದ್ದರಿಂದ, ಈ ಅರ್ಜಿಯ ವಿಚಾರಣೆ ಮುಂದೂಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ADVERTISEMENT

ಇದಕ್ಕೆ ಪ್ರತಿಯಾಗಿ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ, ‘ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 59ರ ಪ್ರಕಾರ ಗಡಿಪಾರು ಆದೇಶ ಹೊರಡಿಸಿದ 30 ದಿನಗಳ ಒಳಗೆ ಬಾಧಿತ ವ್ಯಕ್ತಿಗೆ ಆ ಆದೇಶವನ್ನು ಪ್ರಶ್ನಿಸಿ‌ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೆ, ಅರ್ಜಿದಾರರು ನೇರವಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯು ವಿಚಾರಣಾ ಮಾನ್ಯತೆ ಹೊಂದಿಲ್ಲ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ‘ನಿರೀಕ್ಷಣಾ ಜಾಮೀನು ಅರ್ಜಿ ಕುರಿತಂತೆ ವಿಚಾರಣಾ ನ್ಯಾಯಾಲಯದಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡೋಣ. ನೀವೂ (ಅರ್ಜಿದಾರರು) ಕಲಂ 59ರ ಪ್ರಕಾರ ಮೊದಲು ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಿ. ನಂತರ ಇಲ್ಲಿಗೆ ಬನ್ನಿ. ಯಾವುದೇ ಅಡ್ಡದಾರಿ ಬಳಸಬೇಡಿ’ ಎಂದು ತಿಮರೋಡಿ ಪರ ವಕೀಲರಿಗೆ ಮೌಖಿಕವಾಗಿ ಸೂಚಿಸಿತು.

ಅರ್ಜಿಯ ಅಂತಿಮ ವಿಚಾರಣೆಗಾಗಿ ಇದೇ 13ಕ್ಕೆ ಮುದ್ದತು ನಿಗದಿಪಡಿಸಿದ ನ್ಯಾಯಪೀಠ, ಗಡಿಪಾರು ಆದೇಶ ಸಂಬಂಧ ಆತುರದ ಕ್ರಮ ಜರುಗಿಸದಂತೆ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.