ADVERTISEMENT

ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ- ಡಿಕೆಶಿ, ಕಠಿಣ ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2022, 14:08 IST
Last Updated 13 ಅಕ್ಟೋಬರ್ 2022, 14:08 IST
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್   

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವ ಘಟನೆಯನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಲವಾಗಿ ಖಂಡಿಸಿದ್ದಾರೆ.

ಅಲ್ಲದೆ ತಪ್ಪಿತ್ತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ. ದಿವ್ಯಾಳ ಕುಟುಂಬದ ಜೊತೆ ಮಾತನಾಡಿ, ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಪೊಲೀಸರು ಯಾವುದೇ ಒತ್ತಡಕ್ಕೆ ಈಡಾಗದೆ, ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮಂಡ್ಯದ ಮಳವಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಅಮಾನವೀಯತೆಗೆ ಹಿಡಿದ ಕೈಗನ್ನಡಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ:

ಬಾಲಕಿ ಕುಟುಂಬದವರಿಗೆ ನನ್ನ ಸಂತಾಪಗಳು. ಹೆಣ್ಣು ಮಕ್ಕಳಿಗೆ ನಮ್ಮ ರಾಜ್ಯದಲ್ಲಿ ಸುರಕ್ಷತೆಯಿಲ್ಲ ಎಂಬುದು ವಿಷಾದನೀಯ. ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಅಪರಾಧಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಮಳವಳ್ಳಿಯಲ್ಲಿ ಟ್ಯೂಷನ್‌ಗೆ ಬಂದಿದ್ದ ಬಾಲಕಿಗೆ, ಅಲ್ಲಿನ ಕೆಲಸಗಾರನೇ ಚಾಕೋಲೇಟ್ ಆಸೆ ತೋರಿಸಿ ಹೊರಗೆ ಕರೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದನು. ಬಳಿಕ ಮೃತದೇಹ ನೀರಿನ ಸಂಪ್‌ನಲ್ಲಿ ಪತ್ತೆಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ 50 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.