ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಶುಕ್ರವಾರ (ಅ.3) ದಿಂದ ಅವರು ತಮ್ಮ ದೈನಂದಿನ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ ಎಂದು ಖರ್ಗೆ ಅವರ ಮಗ ಪ್ರಿಯಾಂಕ್ ಹೇಳಿದ್ದಾರೆ.
ಉಸಿರಾಟದ ತೊಂದರೆಯ ಕಾರಣಕ್ಕಾಗಿ ಖರ್ಗೆ ಅವರನ್ನು ಮಂಗಳವಾರ ರಾತ್ರಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಅವರಿಗೆ ಪೇಸ್‌ಮೇಕರ್ ಅಳವಡಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕರೆ ಮಾಡಿ ಖರ್ಗೆ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಬಳಿಕ ‘ಎಕ್ಸ್’ ಮಾಡಿರುವ ಮೋದಿ, ‘ಖರ್ಗೇಜಿ ಅವರೊಂದಿಗೆ ಮಾತನಾಡಿ, ಅವರ ಆರೋಗ್ಯ ವಿಚಾರಿಸಿ, ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದ್ದೇನೆ. ಅವರು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಪಡೆಯಲಿ ಎಂದು ಪ್ರಾರ್ಥಿಸಿದ್ದೇನೆ’ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಖರ್ಗೆ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ, ‘ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ. ನಮ್ಮ ಜೊತೆ ಚೆನ್ನಾಗಿಯೇ ಮಾತನಾಡಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.