ಮಂಡ್ಯ: ನಗರದಲ್ಲಿ ಸಂಭವಿಸಿರುವ ಮುಗ್ಧ ಬಾಲಕಿಯ ದುರ್ಮರಣ ನನಗೆ ತೀವ್ರ ದುಃಖವುಂಟು ಮಾಡಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ನಾಯಿ ಕಡಿತದ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ತನ್ನ ತಂದೆ-ತಾಯಿ ಜತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಗು ಹೀಗೆ ಅಕಾಲ ಮರಣಕ್ಕೆ ತುತ್ತಾಗಿರುವುದು ನನ್ನ ಮನಸ್ಸನ್ನು ಕಲಕಿದೆ’ ಎಂದು ಅವರು ಹೇಳಿದ್ದಾರೆ.
‘ಸಂಚಾರಿ ಪೊಲೀಸರು ಕರ್ತವ್ಯದಲ್ಲಿದ್ದಾಗ ಅತ್ಯಂತ ಸೂಕ್ಷ್ಮವಾಗಿ ವರ್ತಿಸಬೇಕು. ವಾಹನಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರನ್ನು ಏಕಾಏಕಿ ರಸ್ತೆಯಲ್ಲಿ ತಡೆದು ನಿಲ್ಲಿಸುವ ಅಥವಾ ಅವರಿಗೆ ಗಾಬರಿ ಉಂಟು ಮಾಡುವ ರೀತಿಯಲ್ಲಿ ವರ್ತಿಸಬಾರದು. ಸ್ವಲ್ಪ ಎಚ್ಚರ ವಹಿಸಿದ್ದಿದ್ದರೆ ಮಗುವಿನ ಸಾವನ್ನು ತಪ್ಪಿಸಬಹುದಿತ್ತು. ಭವಿಷ್ಯದಲ್ಲಿ ಇಂಥ ಅಚಾತುರ್ಯದ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು’ ಎಂದು ಎಚ್‌ಡಿಕೆ ತಿಳಿಸಿದ್ದಾರೆ.
‘ಸಾರ್ವಜನಿಕರು ಕೂಡ ಸಂಚಾರ ನಿಯಮಗಳನ್ನು ಪಾಲಿಸಬೇಕು. ತಮ್ಮ ಜೀವದ ರಕ್ಷಣೆಗಾಗಿಯೇ ನಿಯಮಗಳನ್ನು ಮೀರಬಾರದು ಎಂಬುದು ನನ್ನ ವಿನಮ್ರ ಮನವಿ. ಈ ನಿಟ್ಟಿನಲ್ಲಿ ಪೊಲೀಸರು ಇನ್ನೂ ಹೆಚ್ಚಿನ ಜಾಗೃತಿಯನ್ನು ಮೂಡಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.
ಮೃತಪಟ್ಟ ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್‌ಡಿಕೆ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಮಗು ಸಾವು ಪ್ರಕರಣ | ತನಿಖೆ ನಡೆಸಿ ಸೂಕ್ತ ಕ್ರಮ: ಚಲುವರಾಯಸ್ವಾಮಿ
ಮಂಡ್ಯದ ಸ್ವರ್ಣಸಂದ್ರ ಬಳಿಯ ನಂದ ಸರ್ಕಲ್‌ನಲ್ಲಿ ಸಂಚಾರಿ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ವೇಳೆ ನಡೆದ ಅನಾಹುತದಿಂದ ಪುಟ್ಟ ಮಗುವೊಂದು ಮೃತಪಟ್ಟ ಘಟನೆ ತಿಳಿದು ಅತೀವ ದುಃಖವಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಘಟನೆ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಮೃತ ಮಗು ಹೃತಿಕ್ಷಾಳ ತಂದೆ-ತಾಯಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ಘಟನೆಯ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಅಮಾನತುಗೊಳಿಸಿ, ತನಿಖೆಗೆ ಒಳಪಡಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.