ಬೆಂಗಳೂರು: ‘ಮಂಗಳೂರು ನಗರದಲ್ಲಿ ಹೊಸದಾಗಿ ಎಲೆಕ್ಟ್ರಿಕ್ ಆಟೊ ರಿಕ್ಷಾಗಳ ಕಾರ್ಯಾಚರಣೆಗೆ ಅನುಮತಿ ನೀಡಬಾರದು ಎಂದು ಮಂಗಳೂರು ಆಟೊ ರಿಕ್ಷಾ ಚಾಲಕರು ಹಾಗೂ ಮಾಲೀಕರ ಸಂಘ ಸಲ್ಲಿಸಿರುವ ಮನವಿಯನ್ನು ಎರಡು ವಾರಗಳಲ್ಲಿ ಕಾನೂನು ರೀತ್ಯಾ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು’ ಎಂದು ಹೈಕೋರ್ಟ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನಿರ್ದೇಶಿಸಿದೆ.
ಈ ಸಂಬಂಧ ‘ಮಂಗಳೂರು ಆಟೊ ರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘ’ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿ ಅರ್ಜಿ ವಿಲೇವಾರಿ ಮಾಡಿದೆ.
ಅರ್ಜಿಯಲ್ಲಿ ಏನಿತ್ತು?: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರವಾನಗಿ ಪಡೆಯದೆ ಎಲೆಕ್ಟ್ರಿಕ್ ಆಟೊ ರಿಕ್ಷಾ ವಾಹನಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಿ 2024ರ ಜುಲೈ 26ರಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದರಿಂದ ಮಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗಿ, ಸಂಚಾರ ದಟ್ಟಣೆ ಉಂಟಾಗಿದೆ. ಈಗಾಗಲೇ ಕಾರ್ಯಾಚರಣೆ ನಡೆಸುತ್ತಿರುವ ಆಟೊ ರಿಕ್ಷಾಗಳಿಗೇ ನಿಲುಗಡೆಗೆ ಸ್ಥಳಾವಕಾಶ ಇಲ್ಲದೆ ಜಾಗದ ಕೊರತೆ ಎದುರಾಗಿದೆ. 2023ರಲ್ಲಿ 7,629 ರಷ್ಟಿದ್ದ ಆಟೊ ರಿಕ್ಷಾಗಳ ಸಂಖ್ಯೆ ಈಗ ಅಗತ್ಯ ಪ್ರಮಾಣಕ್ಕಿಂತ ಹತ್ತುಪಟ್ಟು ಹೆಚ್ಚಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದರು.
‘ಈ ದಿಸೆಯಲ್ಲಿ 2025ರ ಜುಲೈ 9ರಂದು ನಾವು ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿ, ಹೊಸ ಎಲೆಕ್ಟ್ರಿಕ್ ಆಟೊ ರಿಕ್ಷಾಗಳು ಮಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯಚರಣೆ ಮಾಡಲು ಅನುಮತಿ ನೀಡಬಾರದು’ ಎಂದು ಕೋರಿದ್ದೆವು. ಆದರೆ, ಈ ಮನವಿ ಪತ್ರ ಆಧರಿಸಿ ಯಾವುದೇ ಕ್ರಮ ಜರುಗಿಸಿಲ್ಲ. ಆದ್ದರಿಂದ, ನಮ್ಮ ಮನವಿ ಪರಿಗಣಿಸಲು ಜಿಲ್ಲಾಧಿಕಾರಿಗೆ ನಿರ್ದೇಶಿಸಬೇಕು’ ಎಂದು ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.