ADVERTISEMENT

ಪೊಲೀಸ್ ಇಲಾಖೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲು: ಮಂಜಮ್ಮ ಜೋಗತಿ ಸ್ವಾಗತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಡಿಸೆಂಬರ್ 2021, 7:43 IST
Last Updated 23 ಡಿಸೆಂಬರ್ 2021, 7:43 IST
ಮಂಜಮ್ಮ ಜೋಗತಿ
ಮಂಜಮ್ಮ ಜೋಗತಿ    

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ನಡೆಯುವ ನೇಮಕಾತಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದವರಿಗೆ ಶೇ 1 ರಷ್ಟು ಮೀಸಲಾತಿ ಕಲ್ಪಿಸಿ ಡಿಜಿಪಿ ಪ್ರವೀಣ್ ಸೂದ್ ಹೊರಡಿಸಿರುವ ಆದೇಶವನ್ನು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಹಾಗೂ ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿ ಸ್ವಾಗತಿಸಿದ್ದಾರೆ.

ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಅವರು, ‘ಪೋಲಿಸ್ ಇಲಾಖೆಯಲ್ಲಿ ತೃತೀಯಲಿಂಗದವರಿಗೆ ಸೇವೆ ಸಲ್ಲಿಸುವ ಅವಕಾಶದ ಬಗೆಗಿನಈ ಸುದ್ದಿ ಎಲ್ಲರಿಗೆ ತಲುಪಲಿ.. ಸರ್ಕಾರಕ್ಕೆ, ಪೊಲೀಸ್ ಇಲಾಖೆಗೆ ತುಂಬು ಹೃದಯದಿಂದ ಧನ್ಯವಾದಗಳು’ ಎಂದಿದ್ದಾರೆ.

‘ನನ್ನಂತ ಅದೆಷ್ಟೋ ಭಾರತೀಯರ ಆಸೆ ನನಸಾಗುತಿದೆ. ಅಂಬೇಡ್ಕರ್ ಅವರ ಸಮ ಸಮಾಜದ ಕನಸು ನನಸಾಗುವ ಪಯಣದಲ್ಲಿ ಇದೊಂದು ಮಹತ್ವದ ಹೆಜ್ಜೆ. ಜೈ ಕರ್ನಾಟಕ ಜೈ ಹಿಂದ್’ ಎಂದಿದ್ದಾರೆ.

ADVERTISEMENT

‘ಲೈಂಗಿಕ ಅಲ್ಪಸಂಖ್ಯಾತರಿಗೆ ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಶೇ 1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ’ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ತಿಳಿಸಿದ್ದರು.

ಬೆಳಗಾವಿಯಲ್ಲಿ ಮಂಗಳವಾರ ಮಾತನಾಡಿದ್ದ ಅವರು ‘ಪೊಲೀಸ್‌ ಇಲಾಖೆಯಲ್ಲಿ ಮೀಸಲಾತಿ ಕಲ್ಪಿಸುವಂತೆ ಲೈಂಗಿಕ ಅಲ್ಪಸಂಖ್ಯಾತರು ಮನವಿ ಮಾಡಿದ್ದರು. ಅವರ ಮನವಿ ಪುರಸ್ಕರಿಸಲಾಗಿದೆ. ಇದು ದೇಶದಲ್ಲೇ ಮೊದಲ ಹೆಜ್ಜೆ. ಆ ಸಮುದಾಯದಲ್ಲೂ ಅರ್ಹ ಅಭ್ಯರ್ಥಿಗಳಿದ್ದರೆ ಇಲಾಖೆಯಲ್ಲಿ ಕೆಲಸ ಮಾಡುವ ಅವಕಾಶ ಸಿಗಲಿದೆ’ ಎಂದಿದ್ದರು.

‘ಲೈಂಗಿಕ ಅಲ್ಪಸಂಖ್ಯಾತರು ತಪ್ಪು ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತಲೇ ಇರುತ್ತೇವೆ. ಆ ಸಮುದಾಯದವರ‌ಲ್ಲಿ ಉತ್ತಮ ಅಭ್ಯರ್ಥಿಗಳಿದ್ದರೆ ಏಕೆ ಕೆಲಸ ಕೊಡಬಾರದು ಎಂಬ ಆಲೋಚನೆಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದಿದ್ದರು.

ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದ್ದು, ಇದರಲ್ಲಿ ಮಹಿಳೆಯರು ಹಾಗೂ ಪುರುಷರ ಜೊತೆಗೆ ಲೈಂಗಿಕ ಅಲ್ಪಸಂಖ್ಯಾತರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.