ADVERTISEMENT

ಮುಂಗಾರು: ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 27 ಮೇ 2020, 15:03 IST
Last Updated 27 ಮೇ 2020, 15:03 IST
ಅನೀಸ್‌ ಕಣ್ಮಣಿ ಜಾಯ್‌ 
ಅನೀಸ್‌ ಕಣ್ಮಣಿ ಜಾಯ್‌    

ಮಡಿಕೇರಿ: ಜಿಲ್ಲೆಯಲ್ಲಿ 2018 ಮತ್ತು 2019ನೇ ಸಾಲಿನಲ್ಲಿ ಮುಂಗಾರು ಮಳೆ ಸಂದರ್ಭದಲ್ಲಿ ಸಂಭವಿಸಿದ್ದ ಪ್ರಕೃತಿ ವಿಕೋಪವನ್ನು ಗಮನದಲ್ಲಿರಿಸಿಕೊಂಡು ಪ್ರತೀ ವರ್ಷದಂತೆ ಈ ವರ್ಷವೂ ಸಹ ಮುಂಗಾರು ಮಳೆ ಪೂರ್ವ ತಯಾರಿಯನ್ನು ಜಿಲ್ಲಾಡಳಿತವು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದರು.

ಪೂರ್ವ ತಯಾರಿ ಏನು– ಎತ್ತ?: ಕಳೆದ ವರ್ಷದಂತೆ ಈ ವರ್ಷವೂ ಸಹ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ನ್ಯಾಷನಲ್ ಡಿಸಾಸ್ಟರ್ ರೆಸ್ಪಾನ್ಸ್ ಫೋರ್ಸ್) ಮೇ ತಿಂಗಳ ಅಂತ್ಯದೊಳಗೆ ಜಿಲ್ಲೆಗೆ ಆಗಮಿಸಲಿದೆ ಎಂದು ಅವರು ಮಾಹಿತಿ ನೀಡಿದರು.

ಈಗಾಗಲೇ ಜಿಲ್ಲೆಯ ಎಲ್ಲಾ ಹೋಬಳಿಗೆ ಒಬ್ಬರಂತೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಅಧಿಕಾರಿಗಳು ತಾವು ನಿಯೋಜಿಸಲ್ಪಟ್ಟ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಸಭೆ ನಡೆಸಿ, ಈ ಹಿಂದೆ ಪ್ರಕೃತಿ ವಿಕೋಪ ಸಂಭವಿಸಿದ ಪ್ರದೇಶಗಳು, ಪ್ರಕೃತಿ ವಿಕೋಪದಂತಹ ಇತ್ಯಾದಿ ಮಾಹಿತಿಗಳನ್ನು ಕ್ರೋಡೀಕರಿಸಿ, ಮುನ್ನೆಚ್ಚರಿಕೆಯಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಬಂಧಪಟ್ಟ ತಾಲ್ಲೂಕು ಆಡಳಿತದೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಈಗಾಗಲೇ ಕಾರ್ಯ ಪ್ರವೃತ್ತರಾಗಿದ್ದಾರೆ ಎಂದು ವಿವರಿಸಿದರು.

ADVERTISEMENT

ಜಿಲ್ಲೆಯಲ್ಲಿ ಮುಂಗಾರು ಮಳೆ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪವನ್ನು ಯಶಸ್ವಿಯಾಗಿ ಎದುರಿಸಲು ಬೇಕಾದ ಬೋಟ್, ಮನಿಲಾ ರೋಪ್, ಆಕ್ಸೆಲ್, ಸರ್ಚ್ ಲೈಟ್, ಛತ್ರಿ, ಗಂಬೂಟು, ರೈನ್ ಕೋಟ್, ಲೈಫ್ ಜಾಕೆಟ್ ಇತ್ಯಾದಿ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟುಕೊಳ್ಳಲಾಗಿದೆ. ಇನ್ನೂ ಅಗತ್ಯವಿರುವ ಸಾಮಗ್ರಿಗಳಿಗಾಗಿ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಟೆಂಡರುದಾರರು ಮೇ ಮಾಹೆಯ ಅಂತ್ಯದೊಳಗೆ ಸಾಮಗ್ರಿಗಳನ್ನು ಪೂರೈಸಲಿದ್ದಾರೆ ಎಂದು ಹೇಳಿದರು.

ಮುಂಗಾರು ಮಳೆ ಸಂಬಂಧ ಈಗಾಗಲೇ ಜಿಲ್ಲಾಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಎಲ್ಲಾ ಅಧಿಕಾರಿಗಳು ರಜೆಯ ಮೇಲೆ ತೆರಳದೇ ಕೇಂದ್ರ ಸ್ಥಾನದಲ್ಲಿ ಲಭ್ಯವಿದ್ದು, ಅವರವರ ಇಲಾಖಾ ವ್ಯಾಪ್ತಿಯಲ್ಲಿ ಅಗತ್ಯ ಮತ್ತು ತುರ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದರು.

ಅಗ್ನಿಶಾಮಕ, ಗೃಹ ರಕ್ಷಕ, ಪೊಲೀಸ್ ಇಲಾಖೆಯಿಂದ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಉಂಟಾಗಬಹುದಾದ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳ ಬಗ್ಗೆ ಪೂರ್ವ ತಯಾರಿ ನಡೆಸಲಾಗುತ್ತಿದೆ. ಪರಿಹಾರ ಕೇಂದ್ರಗಳನ್ನು ಸ್ಥಾಪಿಸುವ ಅಗತ್ಯವಿದ್ದಲ್ಲಿ ಅದಕ್ಕೆ ಬೇಕಾದ ಸೂಕ್ತ ಕಟ್ಟಡಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾಡಳಿತವು ರಾಜ್ಯ ಪ್ರಕೃತಿ ವಿಕೋಪ ಕೇಂದ್ರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಭಾರತೀಯ ಹವಾಮಾನ ಇಲಾಖೆಯಿಂದ ನೀಡಲಾಗುವ ಹವಾಮಾನ ಮುನ್ಸೂಚನೆಗಳನ್ನು ಪಡೆದು, ಜಿಲ್ಲೆಗೆ ಏನಾದರೂ ಪ್ರತಿಕೂಲ ಹವಾಮಾನವಿದ್ದಲ್ಲಿ ಅದನ್ನು ಸಾರ್ವಜನಿಕರಿಗೆ ತಿಳಿಸಿ, ಎಚ್ಚರ ಮೂಡಿಸಲು ಜಿಲ್ಲಾಧಿಕಾರಿ ಕಚೇರಿಯಿಂದ ಹವಾಮಾನ ಮುನ್ಸೂಚನೆಯನ್ನು ಸಾಮಾಜಿಕ ಜಾಲತಾಣ, ವಾಟ್ಸ್‌ಆ್ಯಪ್ ಮತ್ತು ಮಾಧ್ಯಮಗಳ ಮುಖಾಂತರ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಅಪಾಯದ ಸ್ಥಳದಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಈಗಾಗಲೇ ಸ್ಥಳೀಯ ಪ್ರಾಧಿಕಾರಿಗಳ ಮೂಲಕ ಜನರಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಪ್ರಕೃತಿ ವಿಕೋಪ ನಿಧಿಯಲ್ಲಿ ಸಾಕಷ್ಟು ಅನುದಾನ ಲಭ್ಯವಿದೆ. 2018ರಲ್ಲಿ ಪ್ರಕೃತಿ ವಿಕೋಪದಿಂದ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಈ ವರ್ಷದ ಮುಂಗಾರು ಮಳೆ ಪ್ರಾರಂಭವಾಗುವ ಮುಂಚೆಯೇ ಅವರಿಗಾಗಿ ಸರ್ಕಾರದ ವತಿಯಿಂದ ನಿರ್ಮಿಸಲಾಗುತ್ತಿರುವ ಮನೆಗಳನ್ನು ಹಸ್ತಾಂತರಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ಮುಂಗಾರು ಮಳೆಯಲ್ಲಿ ತಲೆದೋರಬಹುದಾದ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತವು ಸಜ್ಜಾಗಿದ್ದು, ಜಿಲ್ಲೆಯ ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.