ADVERTISEMENT

ಮಂಗಗಳ ಹತ್ಯೆ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆ

ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಹಾಸನ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 16:42 IST
Last Updated 4 ಆಗಸ್ಟ್ 2021, 16:42 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದಿದ್ದ ಮಂಗಗಳ ಹತ್ಯೆ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ತಿಳಿಸಿದೆ.

‘ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್‌) ನೇತೃತ್ವದ ಎಸ್‌ಐಟಿ ತಂಡ ಏಳು ಆರೋಪಿಗಳನ್ನು ಈಗಾಗಲೇ ಬಂಧಿಸಿದೆ’ ಎಂದು ಹಾಸನ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದಾರೆ.

‘ಮಂಗಗಳು ಉಸಿರುಗಟ್ಟಿ ಅಥವಾ ವಿಷ ಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಮರಣೋತ್ತರ ಪರೀಕ್ಷಾ ವರದಿ ಹೇಳುತ್ತಿದೆ. ಬೆಳೆಹಾನಿ ಮಾಡುತ್ತಿದ್ದ ಕಾರಣಕ್ಕೆ ಮಂಗಗಳನ್ನು ಹಿಡಿಯುವವರನ್ನು ಕರೆಸಿ ಅವುಗಳನ್ನು ಹಿಡಿಸಿದ್ದರು. ಬೇರೆಡೆಗೆ ಸಾಗಿಸುವ ಸಂದರ್ಭದಲ್ಲಿ ಈ ರೀತಿ ಆಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ’ ಎಂದು ಜಿಲ್ಲಾಧಿಕಾರಿ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ‘ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‌ಎಸ್‌ಎಲ್‌) ವರದಿಗಾಗಿ ಕಾಯಲಾಗುತ್ತಿದೆ’ ಎಂದು ಸರ್ಕಾರಿ ವಕೀಲರು ವಿವರಿಸಿದರು.

ADVERTISEMENT

‘ಈ ರೀತಿಯ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸಲು ಇರುವ ಕಾನೂನು ತೊಡಕುಗಳನ್ನು ಪರಿಹರಿಸುವ ಅಗತ್ಯವಿದೆ’ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

ಬೇಲೂರು ತಾಲ್ಲೂಕಿನ ಚೌಡನಹಳ್ಳಿ ರಸ್ತೆ ಬದಿಯಲ್ಲಿ ಬಿಸಾಡಿದ್ದ ಚೀಲದಲ್ಲಿ 38 ಮೃತಪಟ್ಟ ಮಂಗಗಳು, ಸಾವು–ಬದುಕಿನ ನಡುವೆ ಸೆಣೆಸುತ್ತಿದ್ದ 15 ಮಂಗಗಳು ದೊರೆತಿದ್ದವು. ಈ ಪ್ರಕರಣದ ಸಂಬಂಧ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.