ಸಿದ್ದರಾಮಯ್ಯ
(ಚಿತ್ರ ಕೃಪೆ: X/@siddaramaiah)
ಬೆಂಗಳೂರು: ನಗರದಲ್ಲಿ ಇಂದು ನಡೆದ 'ಪತ್ರಿಕಾ ದಿನಾಚರಣೆ-2025' ಹಾಗೂ 'ನಿಜ ಸುದ್ದಿಗಾಗಿ ಸಮರ' ಸಂವಾದದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಳ್ಳು ಸುದ್ದಿಗಳು ಹಾಗೂ ಊಹಾ ಪ್ರತಿಕೋದ್ಯವು ಪ್ರತಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ ಎಂದು ಪ್ರತಿಪಾದಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದಿರುವ ಸಿಎಂ ಸಿದ್ದರಾಮಯ್ಯ, 'ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ಅರ್ಥವಲ್ಲವೇ? ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ. ಹೀಗಾಗಿ ಪತ್ರಿಕೋದ್ಯಮವು ಇದರಿಂದ ಹೊರಗೆ ಬರಬೇಕಿದೆ' ಎಂದು ಹೇಳಿದ್ದಾರೆ.
'ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್‌ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಮಾಡಿ ಪ್ರಶ್ನೆ ಮಾಡುವವನಲ್ಲ. ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ, ಮೂಢನಂಬಿಕೆ ಬಿತ್ತುವುದನ್ನು ಪತ್ರಿಕಾವೃತ್ತಿ ಎಂದು ಕರೆಯಬೇಕಾ? ಜನರನ್ನು ಮೌಡ್ಯಕ್ಕೆ ತಳ್ಳುವುದು ಪತ್ರಿಕಾ ವೃತ್ತಿಯಾ? ಈ ಬಗ್ಗೆ ನೀವೆಲ್ಲರೂ ಯೋಚಿಸಬೇಕು' ಎಂದು ಹೇಳಿದ್ದಾರೆ.
'ನಾನು ಇಂದು ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಮಾಧ್ಯಮ ಸಂಜೀವಿನಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಪತ್ರಕರ್ತರಿಗೆ ಅನುಕೂಲ ಒದಗಿಸಿದ್ದೇನೆ. ನಮ್ಮ ಪರವಾಗಿ ಬರೆಯಲಿ ಎನ್ನುವ ಕಾರಣದಿಂದ ಇವನ್ನು ಜಾರಿ ಮಾಡಿರುವುದಲ್ಲ. ನೀವೆಲ್ಲ ಸತ್ಯ ಬರೆಯಿರಿ, ಜನರ ಪರವಾಗಿ, ಪ್ರಜಾಪ್ರಭುತ್ವದ ಪರವಾಗಿ ಇರಬೇಕು' ಎಂಬುದು ನಮ್ಮ ಆಶಯ ಎಂದಿದ್ದಾರೆ.
'ಸ್ವಾತಂತ್ರ್ಯಪೂರ್ವದಲ್ಲಿ ಜನರನ್ನು ಎಚ್ಚರಿಸುವ, ಸ್ವಾತಂತ್ರ್ಯ ಹೋರಾಟದ ಪರವಾಗಿ ಪತ್ರಿಕೆಗಳು ಕೆಲಸ ಮಾಡಿದ್ದವು. ಇಂದು ಪ್ರಜಾಪ್ರಭುತ್ವದ ಉಳಿವಿಗಾಗಿ ಶ್ರಮಿಸಬೇಕು. ಸಂವಿಧಾನದ ಮೌಲ್ಯಗಳು ಮತ್ತು ಸತ್ಯವನ್ನು ಮರೆಮಾಚುವ ಕೆಲಸ ಆಗಬಾರದು. ಎಲ್ಲ ಜನರಿಗೂ ಸಮಾನ ಅವಕಾಶ ಮತ್ತು ಜಾತಿ-ವರ್ಗ ರಹಿತ ಸಮಾಜ ಸೃಷ್ಟಿಯಾಗಬೇಕು ಎನ್ನುವುದು ಸಂವಿಧಾನದ ಮೌಲ್ಯ. ಇದನ್ನು ಎತ್ತಿ ಹಿಡಿಯುವುದು ಪತ್ರಿಕಾ ವೃತ್ತಿಯ ಜವಾಬ್ದಾರಿ' ಎಂದು ಹೇಳಿದ್ದಾರೆ.
'ದ್ವೇಷದ, ಪ್ರೀತಿಯಿಲ್ಲದ ಸಮಾಜ ಸೃಷ್ಟಿಸುವ ಪ್ರಯತ್ನಕ್ಕೆ ಮಾಧ್ಯಮಗಳು ಬೆಂಬಲಿಸಬಾರದು. ನನ್ನ ಮಾತುಗಳನ್ನು ಕೇವಲ ಪಕ್ಷದ ಚೌಕಟ್ಟಿನಲ್ಲಿ ಮಾತ್ರ ನೋಡದೆ ಸಮಾಜ ಮುಖಿಯಾಗಿ ಕೂಡ ನೋಡಬೇಕು' ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.