
ಡಾ. ಶರಣಪ್ರಕಾಶ ಪಾಟೀಲ
ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ಹಾಗೂ ಬಾಗಲಕೋಟೆಯಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಎನ್‌ಎಂಸಿಗೆ ಪ್ರಸ್ತಾವ ಸಲ್ಲಿಸಲಾಗುವುದು. ಕಟ್ಟಡ ಹಾಗೂ ಆಸ್ಪತ್ರೆಯ ಕೊರತೆಯ ಕಾರಣ ಕನಕಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಪ್ರಸ್ತಾವ ಈ ವರ್ಷವೂ ಸಲ್ಲಿಸುವುದಿಲ್ಲ ಎಂದು ಈ ಕುರಿತು ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಸ್ಪಷ್ಟಪಡಿಸಿದರು.
ಈ ಕುರಿತು ಮಾತನಾಡಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ನೇಮಕಾತಿ, ಮೂಲಸೌಕರ್ಯ ಕೊರತೆ ಕಾರಣ 3 ವರ್ಷಗಳಿಂದ ರಾಮನಗರ, ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಅನುಮೋದನೆ ಸಿಕ್ಕಿಲ್ಲ. ಕಳೆದೆರಡು ಶೈಕ್ಷಣಿಕ ವರ್ಷಗಳಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವಕ್ಕೆ ಎನ್‌ಎಂಸಿ ಅನುಮತಿ ನಿರಾಕರಿಸಿತ್ತು. ಕನಕಪುರದಲ್ಲಿ ₹550 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ನಿರ್ಮಾಣ ಕಾಮಗಾರಿಗೆ ಟೆಂಡರ್ ಆಹ್ವಾನಿ ಸಲಾಗಿದೆ. ಬಾಗಲಕೋಟೆಯಲ್ಲಿ ₹250 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು.
ಹೆಚ್ಚುವರಿ 50 ಸೀಟು– ಪ್ರಸ್ತಾವ: ಎಲ್ಲ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲೂ 50 ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಲು ಪ್ರಸ್ತಾವ ಸಲ್ಲಿಸುವಂತೆ ಸೂಚಿಸಲಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) 2025–26ನೇ ಸಾಲಿನಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ 450 ವೈದ್ಯಕೀಯ ಸೀಟುಗಳನ್ನು ಮಂಜೂರು ಮಾಡಿತ್ತು. 421 ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೂ ಅನುಮೋದನೆ ಸಿಕ್ಕಿತ್ತು. ಮೂಲಸೌಕರ್ಯ ಹೊಂದಿರುವ ಕಾಲೇಜುಗಳಿಗೆ 2026–27ನೇ ಸಾಲಿನಲ್ಲಿ ವೈದ್ಯಕೀಯ ಸೀಟುಗಳ ಹೆಚ್ಚಳಕ್ಕಾಗಿ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಲಾಗಿದೆ’ ಎಂದು ಹೇಳಿದರು.