ADVERTISEMENT

ರಾಜ್ಯದ ವಿದ್ಯಾರ್ಥಿಗಳಿಗೆ ಶೇ 50 ರಷ್ಟು ಸೀಟುಗಳು

ವೈದ್ಯಕೀಯ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಜತೆ ಇಂದು ಸಭೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 20:30 IST
Last Updated 19 ಜೂನ್ 2019, 20:30 IST

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ 50 ರಷ್ಟು ಸೀಟುಗಳನ್ನು ಮೀಸಲಿಡು ವಂತೆ ಒತ್ತಾಯಿಸಲು ರಾಜ್ಯ ಸರ್ಕಾರ ಗುರುವಾರ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಸಭೆಯನ್ನು ಕರೆದಿದೆ.

ನೀಟ್‌ ಪದ್ಧತಿಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಅವಕಾಶ ಕಡಿಮೆ ಆಗುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಆತಂಕ ವ್ಯಕ್ತವಾಗಿರುವ ಕಾರಣ, ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಮುಖ್ಯಸ್ಥರು, ಸ್ವಾಯತ್ತ ವಿಶ್ವವಿದ್ಯಾಲಯಗಳ ಆಡಳಿತ ಮಂಡಳಿಯ ಪ್ರಮುಖರು, ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತ ವೈದ್ಯಕೀಯ ಆಡಳಿತ ಮಂಡಳಿಗಳ ಪ್ರಮುಖರೂ ಭಾಗವಹಿಸಲಿದ್ದಾರೆ. ಈ ಎಲ್ಲ ಬಗೆಯ ವೈದ್ಯಕೀಯ ಕಾಲೇಜುಗಳಲ್ಲೂ ಶೇ 50ರಷ್ಟು ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡಲು ಕೋರಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ADVERTISEMENT

ನೀಟ್‌ ಪದ್ಧತಿ ಜಾರಿಗೆ ಬಂದ ಮೇಲೆ ಬಹುತೇಕ ಸೀಟುಗಳು ಹೊರ ರಾಜ್ಯದವರ ಪಾಲಾಗುತ್ತಿವೆ. ಅವರು ತಮ್ಮ ರಾಜ್ಯಗಳಿಗೆ ಹೋಗದೇ ಕರ್ನಾಟಕವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ರಾಜ್ಯದಲ್ಲಿ ಹೊರ ರಾಜ್ಯಗಳ ವೈದ್ಯರ ಸಂಖ್ಯೆ ಹೆಚ್ಚಾಗುತ್ತದೆ. ಇಂತಹ ಪ್ರವೃತ್ತಿ ತಡೆಗಟ್ಟಲುತಮಿಳುನಾಡು ಕಾಯ್ದೆಯೊಂದನ್ನು ರೂಪಿಸಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಕಾಯ್ದೆ ತರುವ ಅಗತ್ಯವಿರುವುದನ್ನು ಆಡಳಿತ ಮಂಡಳಿಗಳಿಗೆ ಸಚಿವರು ಮನವರಿಕೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡಿನ ಮಾದರಿಯಲ್ಲಿ ರಾಜ್ಯದ ವಿದ್ಯಾರ್ಥಿಗಳ ಹಿತ ರಕ್ಷಿಸಲು ರಾಜ್ಯ ಸರ್ಕಾರ ಈಗಾಗಲೇ ಸರಣಿ ಸಭೆಗಳನ್ನು ನಡೆಸಿದೆ. ಕೆಲವು ದಿನಗಳ ಹಿಂದೆ ಸಭೆಯೊಂದನ್ನು ನಡೆಸಿದ ಎಂ.ಡಿಯಲ್ಲಿ ಶೇ 57 ರಷ್ಟು ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡಲು ತೀರ್ಮಾನಿಸಲಾಯಿತು.

ಇದಕ್ಕೆ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಒಪ್ಪಿಗೆ ನೀಡಿವೆ. 3,500 ಎಂ.ಡಿ ಸೀಟುಗಳಲ್ಲಿ 1,900 ಸೀಟುಗಳು ರಾಜ್ಯದ ವಿದ್ಯಾರ್ಥಿಗಳಿಗೆ ಸಿಗಲಿದೆ. ಎಂಬಿಬಿಎಸ್‌ನಲ್ಲೂ ಶೇ 50 ರಷ್ಟು ಸೀಟುಗಳು ರಾಜ್ಯದ ವಿದ್ಯಾರ್ಥಿಗಳಿಗೆ ಸಿಗುವಂತೆ ಮಾಡುವುದು ಸರ್ಕಾರದ ಉದ್ದೇಶ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.