ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರಿಸುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಪ್ರಸ್ತಾವದ ಮೇಲೆ ಚರ್ಚೆ ನಡೆಸುವ ಸಂಬಂಧ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಮಂಗಳವಾರ ನಡೆಯಬೇಕಿದ್ದ ಸಭೆಯನ್ನು ಮುಂದೂಡಲಾಗಿದೆ.
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಸಂಬಂಧ ರಾಜ್ಯ ಸರ್ಕಾರವು ಕಳೆದ ಜುಲೈ ತಿಂಗಳಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಎರಡು ಪ್ರಸ್ತಾವಗಳನ್ನು ಕಳುಹಿಸಿತ್ತು. ಆ ಪ್ರಸ್ತಾವಗಳ ಅಂಶಗಳಲ್ಲಿನ ಗೊಂದಲ ನಿವಾರಿಸುವಂತೆ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ರಾಜ್ಯದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿತ್ತು. ಈ ಬಗ್ಗೆ ಚರ್ಚಿಸಲು ಮಂಗಳವಾರ ಸಭೆ ಕರೆಯಲಾಗಿತ್ತು.
ಆದರೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕರು, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನಿರ್ದೇಶಕರು ಸಭೆಗೆ ಹಾಜರಾಗಲು ಸಾಧ್ಯವಾಗದ ಕಾರಣ ಮತ್ತು ಈ ವಿಷಯದ ಚರ್ಚೆಗೆ ಮತ್ತಷ್ಟು ದಾಖಲೆ ಮತ್ತು ವಿಷಯಗಳ ಅಗತ್ಯ ಇದ್ದುದರಿಂದ ಸಭೆಯನ್ನು ಮುಂದೂಡಲಾಗಿದೆ.
‘ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಡಿ. ರಂದೀಪ್ ಅವರು ತಮ್ಮ ಇಲಾಖೆಯ ಅಧಿಕಾರಿಗಳ ಜೊತೆ ಪ್ರಾಥಮಿಕ ಚರ್ಚೆಯನ್ನಷ್ಟೇ ನಡೆಸಿದ್ದಾರೆ. ಮತ್ತೊಮ್ಮೆ ದಿನಾಂಕ ನಿಗದಿ ಮಾಡಿ ಸಭೆ ನಡೆಸಲು ಕಾರ್ಯದರ್ಶಿ ಅವರು ನಿರ್ಧರಿಸಿದ್ದಾರೆ’ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.