ADVERTISEMENT

ಕೈದಿಗಳ ಭೇಟಿಗೆ ಸೂಕ್ತ ವ್ಯವಸ್ಥೆ: ಹೈಕೋರ್ಟ್‌ ತಾಕೀತು

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 19:32 IST
Last Updated 27 ಫೆಬ್ರುವರಿ 2020, 19:32 IST

ಬೆಂಗಳೂರು: ‘ರಾಜ್ಯದಾದ್ಯಂತ ಕಾರಾಗೃಹಗಳಲ್ಲಿ ಕೈದಿಗಳು ತಮ್ಮ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಎರಡು ತಿಂಗಳಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

ಈ ಕುರಿತಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ, ಸರ್ಕಾರದ ಪರ ವಕೀಲ ವೈ.ಎಚ್. ವಿಜಯಕುಮಾರ್, ಕೇಂದ್ರ ಕಾರಾಗೃಹದಲ್ಲಿನ ಸಂದರ್ಶನ ವ್ಯವಸ್ಥೆಯ ಕುರಿತಂತೆ ಫೋಟೊಗಳನ್ನು ಒಳಗೊಂಡ ವರದಿಯನ್ನು ನ್ಯಾಯ ಪೀಠಕ್ಕೆ ಸಲ್ಲಿಸಿದರು.

ADVERTISEMENT

ವರದಿ ಪರಿಶೀಲಿಸಿದ ನ್ಯಾಯಪೀಠ, ‘ಕೈದಿಗಳು ಮತ್ತು ಸಂದರ್ಶಕರ ಭೇಟಿಗೆ ಸೂಕ್ತ ವ್ಯವಸ್ಥೆ ಇಲ್ಲದಿರುವುದು ಫೋಟೊಗಳನ್ನು ಗಮನಿಸಿದರೆ ವೇದ್ಯ ವಾಗುತ್ತದೆ. ಪ್ರಾಯಶಃ ರಾಜ್ಯದ ಎಲ್ಲಾ ಕಾರಾಗೃಹಗಳ ಸ್ಥಿತಿಯೂ ಇದೇ ಆಗಿರಬಹುದು’ ಎಂಬ ಅಭಿಪ್ರಾಯವ್ಯಕ್ತಪಡಿಸಿತು.

‘ಕಾರಾಗೃಹಗಳ ಮೂಲಸೌಕರ್ಯ ಅಭಿವೃದ್ಧಿಗೆ ಹಂತ-ಹಂತವಾಗಿ ಕ್ರಮ ಕೈಗೊಳ್ಳಲು ಕಾರ್ಯ ಯೋಜನೆ ರೂಪಿಸಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ನಿರ್ದೇಶಿಸಿದ ಪೀಠ ವಿಚಾರಣೆಯನ್ನು ಏಪ್ರಿಲ್15ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.