
ಚಿಕ್ಕಮಗಳೂರು: ‘ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಂಬಂಧ ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೂ ಮೊದಲೇ ಮುಖ್ಯಮಂತ್ರಿ ನೇತೃತ್ವದಲ್ಲಿ ಕಾರ್ಮಿಕ ಮುಖಂಡರ ಸಭೆ ನಡೆಸಲು ಉದ್ದೇಶಿಸಲಾಗಿದೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
‘ನೌಕರರ ವೇತನ ಪರಿಷ್ಕರಣೆ ವಿಷಯ ಬಿಟ್ಟರೆ, ಇಲಾಖೆಯಲ್ಲಿ ಬೇರೆ ಸಮಸ್ಯೆ ಇಲ್ಲ. ಐದು ದಿನಗಳ ಹಿಂದೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಶೀಘ್ರವೇ ಸಭೆ ನಡೆಸೋಣ ಎಂದಿದ್ದಾರೆ. ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಅಧಿವೇಶನಕ್ಕೂ ಮೊದಲೇ ಸಭೆ ನಡೆಸುವ ಸಂಬಂಧ ಮುಖ್ಯಮಂತ್ರಿ ಅವರ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದ್ದಾರೆ’ ಎಂದು ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದರು.
‘ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಕಬ್ಬಿನ ದರ ಸೇರಿ ವಿವಿಧ ವಿಷಯಗಳ ಬಗ್ಗೆ ಮಾತನಾಡಲು ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಲು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡುವುದು ವಾಡಿಕೆ. ಏನೇನು ಮಾತುಕತೆ ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ಪತ್ರಿಕೆಗಳಲ್ಲಿ ಬಂದಿರುವ ಸುದ್ದಿಯನ್ನು ಓದಿದ್ದೇನೆ ಅಷ್ಟೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.