ADVERTISEMENT

ನಿಷೇಧಾಜ್ಞೆ ನಡುವೆಯೂ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ: ಆಕ್ರೋಶದ ಕಿಚ್ಚು

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2020, 7:56 IST
Last Updated 3 ಫೆಬ್ರುವರಿ 2020, 7:56 IST
ವಿವಿಧ ಭೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡಿರುವ ಬಿಸಿಯೂಟ ಕಾರ್ಯಕರ್ತೆಯರು
ವಿವಿಧ ಭೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡಿರುವ ಬಿಸಿಯೂಟ ಕಾರ್ಯಕರ್ತೆಯರು   

ಬೆಂಗಳೂರು: ಕನಿಷ್ಠ ಕೂಲಿ ಹೆಚ್ಚಿಸಬೇಕು. ನಿವೃತ್ತಿ ವೇತನ ನೀಡಬೇಕು. ಖಾಸಗಿಕರಣ ಕೈಬಿಡಬೇಕು... ಹೀಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಬೆಳಗ್ಗಿನಿಂದ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯ ಕಿಚ್ಚು ಹೆಚ್ಚುತ್ತಿದ್ದು, ಬಿಸಿಯೂಟ ಕಾರ್ಯಕರ್ತೆಯರ ಆಕ್ರೋಶ ಮುಗಿಲು ಮುಟ್ಟಿದೆ. ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಕಾರನ್ನು ಮನವೊಲಿಸಲು ಪೊಲೀಸರು ನಡೆಸಿದ ಪ್ರಯತ್ನ ವಿಫಲವಾಗಿದೆ.

ನಿಷೇಧಾಜ್ಞೆ ನಡುವೆಯೂ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಅಕ್ಷರ ದಾಸೋಹ ನೌಕರರು ವಿವಿಧ ಜಿಲ್ಲೆಗಳಿಂದ ರೈಲ್ವೆ ನಿಲ್ದಾಣಕ್ಕೆ ಬೆಳಿಗ್ಗೆ ಬಂದಿಳಿದು, ಪ್ರತಿಭನೆಯಲ್ಲಿ ಭಾಗಿಯಾಗಿದ್ದಾರೆ. ಯಾವುದೇ ಕಾರಣಕ್ಕೂ ನಾವು ಸ್ಥಳದಿಂದ ಕದಲುವುದಿಲ್ಲ ಎಂದು ಬಿಗಿಪಟ್ಟು ಹಿಡಿದಿದ್ದಾರೆ.

ADVERTISEMENT

ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿದ್ದ ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷೆ ವರಲಕ್ಷ್ಮಿ ಅವರನ್ನು ಮಹಾಲಕ್ಷ್ಮಿ ಲೇಔಟ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೆಜೆಸ್ಟಿಕ್‍ನಿಂದ ಫ್ರೀಡಂ ಪಾರ್ಕ್‌ವರೆಗೆ ರ್‍ಯಾಲಿ ಹೋಗಲು ಪ್ರತಿಭಟನಾಕಾರರು ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಪ್ರತಿಭಟನೆಗೆ ಅನುಮತಿ ನೀಡದೆ ನಿಷೇಧಾಜ್ಞೆ ಜಾರಿಗೊಳಿಸಿದ್ದರು. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬರುವ ಬಿಸಿಯೂಟ ಕಾರ್ಯಕರ್ತರನ್ನು ಅಲ್ಲಲ್ಲಿಯೇ ತಡೆಯುವಂತೆ ಆಯಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದರು. ಈ ನಡುವೆಯೂ ಪ್ರತಿಭಟನಾಕಾರರು ಫ್ರೀಡಂ ಪಾರ್ಕ್‌ವರೆಗೆ ರ್‍ಯಾಲಿ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಪೊಲೀಸರು ಅದಕ್ಕೆ ಅವಕಾಶ ನೀಡದೆ, ರೈಲ್ವೆ ನಿಲ್ದಾಣದ ಬಳಿಯೇ ತಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.