ಬೆಂಗಳೂರು: ಗಣಿಗಾರಿಕೆಯಲ್ಲಿ ನಡೆದ ಅಕ್ರಮಗಳ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಶಿಫಾರಸುಗಳನ್ನು ಮಾಡಲು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ.
ಸಮಿತಿಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸದಸ್ಯರಾಗಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಈ ಉಪ ಸಮಿತಿಗೆ ಅಗತ್ಯ ನೆರವು ನೀಡಬೇಕು. ಸಮಿತಿಯು ಒಂದು ತಿಂಗಳ ಒಳಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದೂ ಆದೇಶದಲ್ಲಿ ವಿವರಿಸಲಾಗಿದೆ.
ಅಕ್ರಮ ಗಣಿಗಾರಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟವನ್ನು ವಸೂಲಿ ಮಾಡಲು ವಸೂಲಾತಿ ಆಯುಕ್ತರ ನೇಮಕ ಮತ್ತು ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ತ್ವರಿತ ನ್ಯಾಯಾಲಯ ಸ್ಥಾಪಿಸುವ ಬಗ್ಗೆ ಚರ್ಚಿಸಿ, ಸಮಿತಿ ಶಿಫಾರಸುಗಳನ್ನು ಮಾಡಲಿದೆ. ವಸೂಲಾತಿ ಆಯುಕ್ತರ ನೇಮಕ ಮತ್ತು ತ್ವರಿತ ನ್ಯಾಯಾಲಯ ಸ್ಥಾಪಿಸುವ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್.ಕೆ. ಪಾಟೀಲ ಅವರು ಇತ್ತೀಚೆಗೆ ಪತ್ರ ಬರೆದಿದ್ದರು.
ಜುಲೈ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಂಪುಟ ಉಪ ಸಮಿತಿ ರಚಿಸಲು ನಿರ್ಣಯ ಕೈಗೊಳ್ಳಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.