ADVERTISEMENT

ಸಚಿವ ಬಿ.ಸಿ.ನಾಗೇಶ್ ಮನೆಗೆ ಬೆಂಕಿ ಹಚ್ಚುವ ಯತ್ನ: ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 13:44 IST
Last Updated 1 ಜೂನ್ 2022, 13:44 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ತುಮಕೂರು: ತಿಪಟೂರು ನಗರದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಗೆ ಬೆಂಕಿ ಹಚ್ಚುವ ಪ್ರಯತ್ನ ನಡೆದಿದ್ದು, ಇಂತಹ ಗೂಂಡಾ ವರ್ತನೆ ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಲ್ಲಿ ಬುಧವಾರ ಎಚ್ಚರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ, ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಚಿವ ನಾಗೇಶ್ ಮನೆ ಮುಂದೆ ಕಾಂಗ್ರೆಸ್‌, ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ಸಮಯದಲ್ಲಿ ಮನೆಗೆ ನುಗ್ಗಿ ಬೆಂಕಿ ಹಚ್ಚುವ ಪ್ರಯತ್ನ ನಡೆದಿದೆ. ಒಂದಷ್ಟು ಬಟ್ಟೆಗಳಷ್ಟೇ ಸುಟ್ಟಿದೆ. ಹೆಚ್ಚಿನ ಅನಾಹುತ ಸಂಭವಿಸಿಲ್ಲ’ ಎಂದು ತಿಳಿಸಿದರು.

ಹೊರಗಿನಿಂದ ಬಂದವರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ 5 ಮಂದಿ, ಭದ್ರಾವತಿಯ 1, ಚಿಕ್ಕಮಗಳೂರಿನ 2, ದಾವಣಗೆರೆ 3, ತುಮಕೂರು ಒಬ್ಬರು ಸೇರಿದಂತೆ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಉಳಿದವರು ಪರಾರಿಯಾಗಿದ್ದಾರೆ ಎಂದು ವಿವರಿಸಿದರು.

ADVERTISEMENT

ಗೂಂಡಾ ವರ್ತನೆ ತೋರಿದವರನ್ನು ಸುಮ್ಮನೆ ಬಿಡುವುದಿಲ್ಲ. ಮುಂದೆ ಇಂತಹ ಘಟನೆಗಳು ನಡೆಯಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

***

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕುಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.