ADVERTISEMENT

ಮೀಸಲಾತಿ ಗೊಂದಲಕ್ಕೆ ಸೌಹಾರ್ದ ತೆರೆ: ಸಚಿವ ಸಿ.ಸಿ ಪಾಟೀಲ

ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2021, 14:37 IST
Last Updated 5 ಸೆಪ್ಟೆಂಬರ್ 2021, 14:37 IST
ಸಿ.ಸಿ.‍ಪಾಟೀಲ
ಸಿ.ಸಿ.‍ಪಾಟೀಲ   

ಚಿತ್ರದುರ್ಗ: ಪಂಚಮಸಾಲಿ ಸಮುದಾಯದ ಮೀಸಲಾತಿ ಸೌಲಭ್ಯದ ವಿಚಾರಕ್ಕೆ ಸಂಬಂಧಿಸಿದಂತೆ ಸೃಷ್ಟಿಯಾಗಿರುವ ಗೊಂದಲವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೌಹಾರ್ದಯುತವಾಗಿ ಬಗೆಹರಿಸುವ ವಿಶ್ವಾಸವಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.

ಭಾನುವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮೀಸಲಾತಿಗೆ ಸಂಬಂಧಿಸಿದಂತೆ ಹೋರಾಟ ನಡೆಯುತ್ತಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ಸಮುದಾಯ ಮತ್ತು ಸರ್ಕಾರ ಎರಡು ಕಣ್ಣುಗಳಿದ್ದಂತೆ. ಯಾವ ಕಣ್ಣು ಬೇಕು ಎಂದು ಕೇಳಿದರೆ ಏನು ಹೇಳಲಿ’ ಎಂದು ಪ್ರಶ್ನಿಸಿದರು.

‘ಹಲವು ವರ್ಷಗಳಿಂದ ಇರುವ ಸಮುದಾಯದ ಬೇಡಿಕೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಸರಿಯಾದ ದಿಕ್ಕಿನಲ್ಲಿ ಹೆಜ್ಜೆಗಳನ್ನು ಇಡುತ್ತಿದೆ. ಇದು ಒಂದು ದಿನದಲ್ಲಿ ಪರಿಹಾರ ಆಗಲು ಸಾಧ್ಯವಿಲ್ಲ. ಮೀಸಲಾತಿ ಸೌಲಭ್ಯದ ಹೋರಾಟದಲ್ಲಿ ಇನ್ನೊಂದು ಸಮುದಾಯಕ್ಕೂ ಅನ್ಯಾಯ ಆಗಬಾರದು’ ಎಂದರು.

ADVERTISEMENT

ಮುಖ್ಯಮಂತ್ರಿ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುವುದಾಗಿ ಗೃಹ ಸಚಿವ ಅಮಿತ್‌ ಶಾ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ‘ನಾನು ಪಕ್ಷದ ಶಿಸ್ತಿನ ಸಿಪಾಯಿ. ನನ್ನ ಅಭಿಪ್ರಾಯವನ್ನು ಬಹಿರಂಗವಾಗಿ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ನಾಲ್ಕು ಗೋಡೆಗಳ ನಡುವೆ ವರಿಷ್ಠರಿಗೆ ನೇರವಾಗಿ ತಿಳಿಸುವೆ’ ಎಂದಷ್ಟೇ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.