ADVERTISEMENT

ಅನಧಿಕೃತ ಸ್ಫೋಟಕ ಪತ್ತೆಗೆ ಸಚಿವ ನಿರಾಣಿ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 20:15 IST
Last Updated 24 ಫೆಬ್ರುವರಿ 2021, 20:15 IST
ಮುರುಗೇಶ್‌ ನಿರಾಣಿ
ಮುರುಗೇಶ್‌ ನಿರಾಣಿ   

ಚಿಕ್ಕಬಳ್ಳಾಪುರ: ಕಲ್ಲು ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಸ್ಫೋಟಕ ವಸ್ತುಗಳ ದಾಸ್ತಾನುಗಳನ್ನು ಪತ್ತೆ ಹಚ್ಚುವಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನವದೆಹಲಿಯಿಂದ ಮಂಗಳವಾರ ರಾತ್ರಿಬೆಂಗಳೂರಿಗೆ ಬಂದ ಸಚಿವರು ನೇರವಾಗಿ ಹಿರೇನಾಗವಲ್ಲಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ನಾನಾ ಭಾಗಗಳಲ್ಲಿ ಕಲ್ಲು ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ ಎಂದು ಹೇಳಿದರು.

ADVERTISEMENT

ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನಚರಿಕಾ ಕ್ರಮ ತೆಗೆದುಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಸ್ಫೋಟಕ ವಸ್ತುಗಳನ್ನು ಅನುಮತಿ ಪಡೆದವರು ಮಾತ್ರ ಬಳಸಬೇಕು ಎಂಬ ಕಾನೂನು ಜಾರಿಮಾಡಲಿದ್ದೇವೆ. ಇದರಿಂದ ಇಂತಹ ಅನಾಹುತಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದರು.

ಕ್ರಿಮಿನಲ್ ಮೊಕದ್ದಮೆ: ಇಲಾಖೆಯಿಂದ ಅನುಮತಿ ಪಡೆಯದೆ ಸ್ಫೋಟಕಗಳನ್ನು ಸಂಗ್ರಹಿಸಿದರೆ ಮತ್ತು ಬಳಸಿದರೆ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು. ಸ್ಫೋಟಕ ವಸ್ತುಗಳನ್ನು ಬಳಸಲು ಸರ್ಕಾರದಿಂದ ಲೈಸೆನ್ಸ್ ಪಡೆದಿರಬೇಕು. ಇಂತಹ ಘಟನೆಗಳಿಗೆ ಕಾರಣರಾದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.