ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಹಿರಿಯ ಶಾಸಕ ಎಂ.ಬಿ.ಪಾಟೀಲರಿಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಲಿಂಗಾಯತ ಮಠಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗದುಗಿನ ತೋಂಟದಾರ್ಯ ಸಿದ್ದಲಿಂಗ ಸ್ವಾಮೀಜಿ ಮತ್ತು ಇತರ ಸ್ವಾಮೀಜಿಗಳು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಸಮುದಾಯದ ಅತ್ಯಂತ ಹಿರಿಯ ಶಾಸಕರಾರ ಎಂ.ಬಿ.ಪಾಟೀಲರನ್ನು ಹೊರಗಿಟ್ಟಿದ್ದು ಸರಿಯಲ್ಲ. ಅಲ್ಲದೆ, ಸಚಿವ ಸಂಪುಟದಲ್ಲಿ ಲಿಂಗಾಯತ ಶಾಸಕರಿಗೆ ಹೆಚ್ಚಿನ ಪ್ರಾತಿನಿಧ್ಯವೂ ಸಿಕ್ಕಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದರು.
ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವ ಸಂಬಂಧ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳಿಸಿದ್ದ ಕಡತ ಹಿಂದಕ್ಕೆ ಬಂದಿಲ್ಲ. ಈ ಬಗ್ಗೆ ವದಂತಿ ಹರಡಿದೆ. ಅದರಲ್ಲಿ ಹುರುಳಿಲ್ಲ ಎಂದರು.
ಲಿಂಗಾಯತ ಮಹಾಸಭಾ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೋರಾಟವನ್ನು ಸಂಘಟಿಸಲಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಭಾಲ್ಕಿಯ ಬಸವಲಿಂಗ ಪಟ್ಟದೇವರು, ನಾಗನೂರು ರುದ್ರಾಕ್ಷಿಮಠದ ಸಿದ್ದರಾಮ ಸ್ವಾಮೀಜಿ, ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.