ADVERTISEMENT

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಿ: ಯುವ ಮೋರ್ಚಾಗೆ ಸಚಿವ ಆರ್‌. ಅಶೋಕ ಸಲಹೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 17:40 IST
Last Updated 18 ಜುಲೈ 2021, 17:40 IST
   

ಬೆಂಗಳೂರು: ಮುಂಬರುವ ಬಿಬಿಎಂಪಿ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸಿ, ಸಿದ್ಧತೆ ಆರಂಭಿಸಬೇಕು ಎಂದು ಕಂದಾಯ ಸಚಿವ ಆರ್‌. ಅಶೋಕ ಬಿಜೆಪಿ ಯುವ ಮೋರ್ಚಾ ಸದಸ್ಯರಿಗೆ ಸೂಚಿಸಿದರು.

ನಗರದಲ್ಲಿ ಭಾನುವಾರ ನಡೆದ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿಸಿ ಉದ್ಘಾಟಿಸಿ ಮಾತನಾಡಿದ ಅವರು, ‘ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಗೆಲ್ಲಲೇಬೇಕಿದೆ. ಚುನಾವಣೆಯ ಪರೀಕ್ಷೆಯಲ್ಲಿ ಗೆದ್ದು ನಿಮ್ಮ ನಾಯಕತ್ವವನ್ನು ಭದ್ರಪಡಿಸಿಕೊಳ್ಳಿ’ ಎಂದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ಹಲವು ಬದಲಾವಣೆಗಳನ್ನು ತಂದಿದೆ. ಅದನ್ನು ಜನರಿಗೆ ತಿಳಿಸುವ ಕೆಲಸವನ್ನು ಯುವ ಮೋರ್ಚಾ ಸಸದಸ್ಯರು ಮಾಡಬೇಕು. ಯುವ ಮೋರ್ಚಾ ಮೂಲಕ ನಾಯಕರಾಗಿ ಬೆಳೆಯಲು ಅವಕಾಶವಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಬೆಳೆಯಬೇಕು ಎಂದು ಸಲಹೆ ನೀಡಿದರು.

ADVERTISEMENT

ರಾಹುಲ್‌ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೋವಿಡ್‌ನ ಎರಡು ಅಲೆಗಳು ಬಂದು, ಹೋದವು. ಆದರೂ, ಕಾಂಗ್ರೆಸ್‌ ಪಕ್ಷಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ರಾಜ್ಯ ಕಾಂಗ್ರೆಸ್‌ನಲ್ಲೂ ಗುಂಪುಗಾರಿಕೆ ಮುಂದುವರಿದಿದೆ ಎಂದು ಟೀಕಿಸಿದರು.

ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಸಂದೀಪ್ ಕುಮಾರ್ ಮಾತನಾಡಿದರು. ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮತ್ತು ಆಹ್ವಾನಿತ ಪದಾಧಿಕಾರಿಗಳು ಕಾರ್ಯಕಾರಿಣಿಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.