ADVERTISEMENT

ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಸಚಿವರು

'ಗದ್ದಲ, ದಾಂದಲೆ, ಹಲ್ಲೆ ನಡೆದರೆ ರಾಜ್ಯಪಾಲರೇ ಹೊಣೆ'

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 11:45 IST
Last Updated 19 ಆಗಸ್ಟ್ 2024, 11:45 IST
<div class="paragraphs"><p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಚಿವರು ಹಾಗೂ ಶಾಸಕರು ಪಾಲ್ಗೊಂಡಿದ್ದರು.</p></div>

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಚಿವರು ಹಾಗೂ ಶಾಸಕರು ಪಾಲ್ಗೊಂಡಿದ್ದರು.

   

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಚಿವರು ಹಾಗೂ ಶಾಸಕರು ಪಾಲ್ಗೊಂಡಿದ್ದರು. ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಸಚಿವರು, ‘ಥಾವರ್‌ಚಂದ್‌ ಗೆಹಲೋತ್‌ ರಾಜ್ಯಬಿಟ್ಟಿ ತೊಲಗಿ’ ಎಂದು ಆಗ್ರಹಿಸಿದರು.

ADVERTISEMENT

ಸಚಿವ ಜಮೀರ್ ಅಹಮದ್ ಮಾತನಾಡಿ, ‘ರಾಜ್ಯಪಾಲರ ನಡೆ ಖಂಡನೀಯ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಸುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ ಹೈಕಮಾಂಡ್‌, ರಾಜ್ಯದ ಜನರು ಮುಖ್ಯಮಂತ್ರಿ ಪರ ಇದ್ದಾರೆ. ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ಅವರ ಏಳಿಗೆ ಸಹಿಸದೇ ಷಡ್ಯಂತ ಮಾಡಲಾಗಿದೆ’ ಎಂದು ಹೇಳಿದರು.

‘ರಾಜ್ಯಪಾಲರ ನಡೆ ಖಂಡಿಸಿ ರಾಜ್ಯದಾದ್ಯಂತ ಕಾಂಗ್ರೆಸ್‌ ಕಾರ್ತಕರ್ತರು ಹಾಗೂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳು ನಡೆದರೆ ರಾಜ್ಯಪಾಲರೇ ಹೊಣೆ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿಯಾಗಿದೆ’ ಎಂದು ಜಮೀರ್‌ ವಾಗ್ದಾಳಿ ನಡೆಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಮಾತನಾಡಿ, ‘ಥಾವರ್‌ಚಂದ್‌ ಗೆಹಲೋತ್‌ ಅವರು ಘನತೆಯಿಲ್ಲದ ರಾಜ್ಯಪಾಲರು. ಅವರು ರಾಜ್ಯಬಿಟ್ಟು ತೊಲಗಬೇಕು. ಭ್ರಷ್ಟಾಚಾರದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಪಿ.ಎಚ್​ಡಿ ಮಾಡಿದ್ದಾರೆ. ಬ್ಲ್ಯಾಕ್​ಮೇಲ್​ ನೈಪುಣ್ಯತೆ ಇರುವ ಏಕೈಕ ವ್ಯಕ್ತಿ ಅಂದರೆ ಎಚ್​.ಡಿ.ಕುಮಾರಸ್ವಾಮಿ. ಕುಮಾರಸ್ವಾಮಿ ಸಹ ಈಗ ಕಳ್ಳರಕೂಟ ಸೇರಿಕೊಂಡಿದ್ಧಾರೆ’ ಎಂದು ಆರೋಪಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

‘ಒಬ್ಬ ಅಯೋಗ್ಯ, ಬೇಜವಾಬ್ದಾರಿ ರಾಜ್ಯಪಾಲ. ಯಾವುದೇ ದಾಖಲೆಗಳು ಇಲ್ಲದೇ ತನಿಖೆಗೆ ಅನುಮತಿ ನೀಡಿದ್ಧಾರೆ. ನಾವು ಹೋರಾಟದಿಂದಲೇ ಅಧಿಕಾರಕ್ಕೆ ಬಂದಿದ್ಧೇವೆ. ಈಗಲೂ ಸುಮ್ಮನೆ ಕೂರಲ್ಲ. ಹೋರಾಟ ತೀವ್ರವಾಗಲಿದೆ’ ಎಂದು ಸಲೀಂ ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.