
ಬೆಂಗಳೂರು: ‘ನಾಪತ್ತೆಯಾದವರನ್ನು ಸರಿಯಾಗಿ ಹುಡುಕದೇ ಮಿಸ್ಸಿಂಗ್ ಕೇಸ್ ಮುಕ್ತಾಯಗೊಳಿಸಲಾಗುತ್ತಿದೆ’ ಎಂಬ ಆಕ್ಷೇಪವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ಕುರಿತು ಪೊಲೀಸ್ ಇಲಾಖೆಯಿಂದ ವಿವರಣೆ ಪಡೆದು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ನಾಪತ್ತೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರ ಕ್ರಮವನ್ನು ಪ್ರಶ್ನಿಸಿ ನಗರದ ಹಿರಿಯ ನಾಗರಿಕ ಮಹೇಶ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಕುಮಾರ್ ಎಂಬುವರು ನಾಪತ್ತೆಯಾಗಿದ್ದಾರೆ ಎಂದು ಮಹೇಶ್ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ, ಪೊಲೀಸರು ನಾಪತ್ತೆಯಾದವರನ್ನು ಹುಡುಕದೇ ಮಿಸ್ಸಿಂಗ್ ಕೇಸ್ ಮುಕ್ತಾಯಗೊಳಿಸಿದ್ದಾರೆ. ಇದು ಪೊಲೀಸರ ಕಾರ್ಯ ವೈಖರಿಗೆ ಒಂದು ಉದಾಹರಣೆಯಷ್ಟೇ’ ಎಂದರು.
‘ಇದೇ ರೀತಿ ಬಹುತೇಕ ನಾಪತ್ತೆ ಪ್ರಕರಣಗಳನ್ನು ಪೊಲೀಸರು ಮುಕ್ತಾಯ ಮಾಡುತ್ತಿದ್ದಾರೆ. ಅಂಕಿ ಅಂಶಗಳ ಪ್ರಕಾರ ಪ್ರತಿ 8 ನಿಮಿಷಕ್ಕೆ ಒಬ್ಬರು ನಾಪತ್ತೆಯಾಗುತ್ತಿದ್ದಾರೆ ಎಂಬ ವರದಿಗಳಿವೆ. ಆದರೆ, ಪೊಲೀಸರು ಅಂತಹ ಪ್ರಕರಣಗಳಲ್ಲಿ ಯಾವುದೇ ರೀತಿಯ ಸಮಗ್ರ ತನಿಖೆ ಕೈಗೊಳ್ಳುತ್ತಿಲ್ಲ. ನ್ಯಾಯಾಲಯಗಳಿಗೆ ಸರಿಯಾದ ವರದಿಗಳನ್ನು ಸಲ್ಲಿಸುತ್ತಿಲ್ಲ’ ಎಂದು ಆಕ್ಷೇಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಕಾಣೆಯಾದವರನ್ನು ಹುಡುಕದೇ ಪೊಲೀಸರು ಕೇಸ್ ಮುಕ್ತಾಯಗೊಳಿಸುತ್ತಿರುವುದೇಕೆ’ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿತಲ್ಲದೇ, ವಿವರಣೆ ಕೋರಿ ವಿಚಾರಣೆಯನ್ನು ನವೆಂಬರ್ 3ಕ್ಕೆ ಮುಂದೂಡಿತು.
‘ಕಳೆದ 4 ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಿಂದ ಸುಮಾರು ₹7093 ಕೋಟಿ ಮೊತ್ತವನ್ನು ಭಿಕ್ಷುಕರ ಸೆಸ್ ರೂಪದಲ್ಲಿ ಸಂಗ್ರಹ ಮಾಡಿದೆ. ಆದರೂ ರಸ್ತೆಗಳಲ್ಲಿ ಮಕ್ಕಳ ಭಿಕ್ಷಾಟನೆ ಮುಂದುವರಿದಿದೆ’ ಎಂದು ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.
ಈ ಸಂಬಂಧ ‘ಲೆಟ್ಸ್ ಕಿಟ್ ಫೌಂಡೇಷನ್‘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ‘ಇದು ಎಲ್ಲವೂ ಸರಿಯಲ್ಲ ಎಂಬುದನ್ನು ಸೂಚಿಸುತ್ತದೆ’ ಎಂದು ಸರ್ಕಾರದ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಪುತ್ತಿಗೆ ಆರ್.ರಮೇಶ್ ‘ಸರ್ಕಾರ ನೀಡಿರುವ ಮಾಹಿತಿಯ ಅನುಸಾರ 2021-22ರಿಂದ 2024-25ರವರೆಗೆ 4 ವರ್ಷಗಳ ಅವಧಿಯಲ್ಲಿ ಒಟ್ಟು ₹7093 ಕೋಟಿ ಸೆಸ್ ಸಂಗ್ರಹ ಮಾಡಲಾಗಿದೆ. ಅದರಲ್ಲಿ ₹3453 ಕೋಟಿಯಷ್ಟು ಖರ್ಚು ಮಾಡಲಾಗಿದೆ. ಆದರೂ ಮಕ್ಕಳ ಭಿಕ್ಷಾಟನೆ ನಿಂತಿಲ್ಲ’ ಎಂದು ಆಕ್ಷೇಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ‘ಎಷ್ಟು ಸೆಸ್ ಸಂಗ್ರಹ ಮಾಡಲಾಗಿದೆ ಎಷ್ಟು ಖರ್ಚು ಮಾಡಲಾಗಿದೆ ಹಾಗೂ ಬಾಕಿ ಹಣದ ಲೆಕ್ಕ ನೀಡಿ’ ಎಂದು ಸರ್ಕಾರಕ್ಕೆ ಸೂಚಿಸಿತು. ಅಂತೆಯೇ ಸೆಸ್ ಸಂಗ್ರಹದ ಕುರಿತು ಎಲ್ಲಾ ಅಂಕಿ ಅಂಶ ಸಂಗ್ರಹಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಿರ್ದೇಶಿಸಿತು.
‘ಸ್ಥಳೀಯ ಸಂಸ್ಥೆಗಳು ಸಂಗ್ರಹಿಸಿರುವ ಭಿಕ್ಷುಕರ ಸೆಸ್ ಅನ್ನು ರಿಕವರಿ ಮಾಡಿಕೊಳ್ಳಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಿ’ ಎಂದು ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು 8 ವಾರಗಳ ಕಾಲ ಮುಂದೂಡಿದೆ.
ಅರ್ಜಿಯಲ್ಲಿ ಏನಿದೆ?: ‘ಬೆಂಗಳೂರಿನ ಬೀದಿಗಳಲ್ಲಿ ಪ್ರಮುಖವಾಗಿ ಸಂಚಾರಿ ಸಿಗ್ನಲ್‌ಗಳಲ್ಲಿ ಪೆನ್ ಆಟಿಕೆಗಳು ಇಯರ್ ಬಡ್ ಮತ್ತಿತರ ವಸ್ತುಗಳನ್ನು ಮಾರಾಟ ಮಾಡಲು ಹಾಗೂ ಭಿಕ್ಷಾಟನೆಗೆ ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ. ಇದು ಬಾಲ ನ್ಯಾಯ ಕಾಯ್ದೆ ಹಾಗೂ ಸಂವಿಧಾನದ 21ನೇ ವಿಧಿಯ ಉಲ್ಲಂಘನೆ. ಆದ್ದರಿಂದ ಮಕ್ಕಳನ್ನು ಮಾರಾಟದ ಕೆಲಸಕ್ಕೆ ಬಳಸಿಕೊಳ್ಳದಂತೆ ಹಾಗೂ ಅವರನ್ನು ಶಾಲೆಗಳಿಗೆ ದಾಖಲಿಸಲು ಅಗತ್ಯ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರ ಬಿಬಿಎಂಪಿ ಮತ್ತು ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.