ಬೆಂಗಳೂರು: ‘ಜೆಡಿಎಸ್ ಮತ್ತು ಬಿಜೆಪಿ ಶಾಸಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿಲ್ಲ’ ಎಂದು ಆಕ್ಷೇಪಿಸಿ, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಕೆ.ವೆಂಕಟ ಶಿವಾರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತಂತೆ ರಿಟ್ ಅರ್ಜಿ ಸಲ್ಲಿಸಲಾಗಿದ್ದು ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ‘ಕ್ಷೇತ್ರದ ಅಭಿವೃದ್ದಿಗಾಗಿ ಪದೇ ಪದೇ ಮನವಿ ಮಾಡಿದರೂ ಸರ್ಕಾರ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಇರುವ ಕ್ಷೇತ್ರಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಬದಲಿಗೆ, ಕಾಂಗ್ರೆಸ್ ಶಾಸಕರಿಗೆ ತಲಾ ₹50 ಕೋಟಿ ಬಿಡುಗಡೆ ಮಾಡಿದೆ’ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
‘ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದರೂ ಈತನಕ ಹಣ ಬಿಡುಗಡೆ ಮಾಡಲಾಗಿಲ್ಲ. ಇದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಅಷ್ಟೇ ಅಲ್ಲ, ಇದು ಸರ್ಕಾರದ ತಾರತಮ್ಯ ಧೋರಣೆಯಾಗಿದೆ ಮತ್ತು ಸಂವಿಧಾನದ 14ನೇ ವಿಧಿಯ ಉಲ್ಲಂಘನೆಯೂ ಆಗಿದೆ’ ಎಂದು ಆಕ್ಷೇಪಿಸಲಾಗಿದೆ.
ಅರ್ಜಿಯಲ್ಲಿ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಮತ್ತು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಒಟ್ಟು ಐವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಹೈಕೋರ್ಟ್ ವಕೀಲ ರಾಹುಲ್ ಎಸ್.ರೆಡ್ಡಿ ಅರ್ಜಿದಾರರ ಪರ ವಕಾಲತ್ತು ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.