ಬೆಂಗಳೂರು: ಕೋಮು ದ್ವೇಷ ಹರಡಿದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
‘ನನ್ನ ವಿರುದ್ಧದ ಎಫ್‌ಐಆರ್ ಮತ್ತು ಈ ಸಂಬಂಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಹರೀಶ್ ಪೂಂಜ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಪ್ರಕರಣದ ಪ್ರತಿವಾದಿಯೂ ಆದ ದೂರುದಾರ ಎಸ್.ಬಿ. ಇಬ್ರಾಹಿಂ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 20ಕ್ಕೆ ಮುಂದೂಡಿತು.
ಪ್ರಕರಣವೇನು?: ‘ಹರೀಶ್ ಪೂಂಜ ಅವರು ಮೇ 3ರಂದು ತೆಕ್ಕಾರು ಭಟ್ರಬೈಲಿನಲ್ಲಿ, ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡು, ತುಳು ಭಾಷೆಯಲ್ಲಿ ಮಾತನಾಡುತ್ತಾ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷ ಹರಡಿದ್ದಾರೆ. ಈ ಸಂಬಂಧದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲೂ ವೀಕ್ಷಿಸಲಾಗಿದೆ’ ಎಂದು ಆರೋಪಿಸಿ ತೆಕ್ಕಾರಿನ ಎಸ್.ಬಿ. ಇಬ್ರಾಹಿಂ ಅವರು ಉಪ್ಪಿನಂಗಡಿ ಠಾಣೆಯಲ್ಲಿ ಮೇ 4ರಂದು ದೂರು ನೀಡಿದ್ದರು.
ದೂರನ್ನು ಆಧರಿಸಿ ಹರೀಶ್ ಪೂಂಜ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 196 (ಧರ್ಮದ ಆಧಾರದಲ್ಲಿ ದ್ವೇಷ ಹರಡುವುದು), 353(2) (ದ್ವೇಷ ಹರಡಲು ಸುಳ್ಳು ಸುದ್ದಿ ಹಂಚಿಕೆ) ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.