ADVERTISEMENT

ಶಾಸಕ ವೀರೇಂದ್ರ ಜಾಮೀನು ಅರ್ಜಿ ಸಲ್ಲಿಕೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2025, 17:01 IST
Last Updated 26 ಸೆಪ್ಟೆಂಬರ್ 2025, 17:01 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಆನ್‌ ಲೈನ್‌ ಮತ್ತು ಆಫ್‌ ಲೈನ್‌ ಬೆಟ್ಟಿಂಗ್‌ ನಡೆಸುತ್ತಿದ್ದ ಅಕ್ರಮ ಚಟುವಟಿಕೆ ಆರೋಪದಡಿ ಬಂಧನದಲ್ಲಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಹೈಕೋರ್ಟ್‌ ಅನುಮತಿ ನೀಡಿದೆ.

"ನನ್ನ ಪತಿಯ ಬಂಧನ ಅಕ್ರಮ ಎಂದು ಘೋಷಿಸಬೇಕು" ಎಂದು‌ ಕೋರಿ ಕೆ.ಸಿ.ವೀರೇಂದ್ರ ಪತ್ನಿ ಆರ್‌.ಡಿ.ಚೈತ್ರಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್‌ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ಅರ್ಜಿದಾರರ ಪರ ವಕೀಲರು, "ದಸರಾ ಹಬ್ಬದ ಹಿನ್ನೆಲೆಯಲ್ಲಿ ಎರಡು ದಿನ ಮಧ್ಯಂತರ ಜಾಮೀನು ನೀಡುವಂತೆ ಕಳೆದ ವಿಚಾರಣೆ ವೇಳೆ ನ್ಯಾಯಪೀಠವನ್ನು ಕೋರಿದ್ದರು.

ADVERTISEMENT

ಇದಕ್ಕೆ ಕೇಂದ್ರ ಸರ್ಕಾರದ ಪರ ವಕೀಲರು, "ಅರ್ಜಿದಾರರ ಪತಿಗೆ ಜಾಮೀನು ಅಗತ್ಯವಿದ್ದಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ನೇರವಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗದು ಮತ್ತು ಮಧ್ಯಂತರ ಮಂಜೂರು ಮಾಡಬಾರದು" ಎಂದು ಅಕ್ಷೇಪಿಸಿದ್ದರು.

ಇದಕ್ಕೆ ಅರ್ಜಿದಾರರ ಪರ ವಕೀಲರು, "ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅನುಮತಿ ನೀಡಬೇಕು" ಎಂದು ಕೋರಿದರು. ನ್ಯಾಯಪೀಠ ಇದಕ್ಕೆ ಸಮ್ಮತಿ ಸೂಚಿಸಿ ವಿಚಾರಣೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.